ಜೆಡಿಎಸ್-ಕಾಂಗ್ರೆಸ್ಗೆ ಮುಖಭಂಗ; ಇಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 9 ಗಂಟೆಗೆ ರಾಜಭವನದಲ್ಲಿ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

Last Updated : May 17, 2018, 07:38 AM IST
ಜೆಡಿಎಸ್-ಕಾಂಗ್ರೆಸ್ಗೆ ಮುಖಭಂಗ; ಇಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ title=

ನವದೆಹಲಿ : ಕರ್ನಾಟಕದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ಉತ್ತರ ದೊರೆತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 9 ಗಂಟೆಗೆ ರಾಜಭವನದಲ್ಲಿ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಬುಧವಾರ ರಾತ್ರಿ ರಾಜ್ಯಪಾಲರು ಹೆಚ್ಚು ಮತ ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿ, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಮ್ಮತಿ ಸೂಚಿಸುತ್ತಿದ್ದಂತೆಯೇ, ಒಂದೆಡೆ ಬಿಜೆಪಿ ಸಂಭ್ರಮಾಚರಣೆ ಆಚರಿಸಿದರೆ ಮತ್ತೊಂದೆಡೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದನ್ನು ತಡೆಯಬೇಕು ಮತ್ತು ಬಹುಮತ ಸಾಬೀತು ಪಡಿಸಿದ ತಮಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಹೇಳಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದ ಹಿನ್ನೆಲೆಯಲ್ಲಿ ರಾತ್ರಿಯಿಡೀ ಸಖತ್ ಹೈಡ್ರಾಮ ನಡೆಯಿತು.

ಬುಧವಾರ ತಡರಾತ್ರಿ 1.50ರ ಸುಮಾರಿಗೆ ಆರಂಭವಾದ ಅರ್ಜಿ ವಿಚಾರಣೆ ಬೆಳಗ್ಗೆ 5.20ರ ತನಕ ನಡೆಯಿತು. ಕಾಂಗ್ರೆಸ್ ಪರ ಅಭಿಷೇಕ್ ಮನು ಸಿಂಘ್ವಿ ಹಾಗೂ ಬಿಜೆಪಿ ಶಾಸಕರ ಪರ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. 

ಸುಪ್ರೀಂ ಕೋರ್ಟ್ನಲ್ಲಿ ನಡೆದದ್ದೇನು?

ರಾತ್ರಿ 2 ಗಂಟೆಗೆ ಆರಂಭವಾದ ಅರ್ಜಿ ವಿಚಾರಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಪರ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು, ಬಹುಮತವಿಲ್ಲದ ಬಿಜೆಪಿಗೆ ರಾಜ್ಯಪಾಲರು ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿರುವುದು ಟೀಕಾಸ್ಪದ. ಕಾಂಗ್ರೆಸ್‌ - ಜೆಡಿಎಸ್‌ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡದಿರುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ವಾದ ಮಂಡಿಸಿದ ಸಿಂಘ್ವಿ ಅವರು, ಬಹುಮತ ಸಾಬೀತುಪಡಿಸಲು ಬಿಜೆಪಿಗೆ 15 ದಿನ ಕಾಲಾವಕಾಶ ನೀಡಿರುವ ಕ್ರಮವನ್ನೂ ಸಹ ಈ ಸಂದರ್ಭದಲ್ಲಿ ಆವರು ಕೋರ್ಟ್‌ ಗಮನಕ್ಕೆ ತಂದರು.

ಆದರೆ, ಜೆಡಿಎಸ್-ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿ ಅಲ್ಲದೆ, ಚುನಾವಣಾ ನಂತರದ ಮೈತ್ರಿಯ ಆದ್ದರಿಂದ ಅತಿ ದೊಡ್ಡ ಪಕ್ಷವನ್ನು ರಾಜ್ಯಪಾಲರು ಸರ್ಕಾರ ರಚನೆಗೆ ಅಹ್ವಾನಿಸಿದ್ದಾರೆ ಎಂದು ಪೀಠ ಅಭಿಪ್ರಾಯಪಟ್ಟಿತು. ಅದರೆ ಸಿಂಘ್ವಿ ಅವರು, ಅತೀ ದೊಡ್ಡ ಪಕ್ಷವಾದರೂ ಬಿಜೆಪಿಗೆ ಬಹುಮತವಿಲ್ಲ ಎಂಬ ವಾದವನ್ನು ಪೀಠದ ಮುಂದೆ ಮಂಡಿಸಿದರು.

ಇದಕ್ಕೆ ವಿರುದ್ಧವಾಗಿ ಬಿಜೆಪಿ ಪರ ವಕೀಲ ಮಾಜಿ ಅಟಾರ್ನಿ ಜನರಲ್‌ ಮುಕುಲ್‌ ರೋಹ್ಟಾಗಿ ಅವರು ನ್ಯಾಯಪೀಠದ ಮುಂದೆ ತನ್ನ ವಾದವನ್ನು ಮಂಡಿಸಿ, ರಾತೋರಾತ್ರಿ ಈ ವಿಷಯದ ಕುರುತಾಗಿ ವಾದ ಮಂಡಿಸುವ ಅಗತ್ಯವಿಲ್ಲ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದರು. 

ಆದರೆ, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಗುರುವಾರ(ಮೇ 17) ಬೆಳಗ್ಗೆ ನಿಗದಿಯಾಗಿರುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಅಭಿಷೇಕ್ ಮನು ಸಿಂಘ್ವಿ ವಾದವನ್ನು ತಳ್ಳಿ ಹಾಕಿದ್ದಾರೆ. ಈ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ತೀವ್ರ ಹಿನ್ನಡೆ ಉಂಟಾಗಿದೆ. 

ತ್ರಿಸದಸ್ಯ ಪೀಠದ ತೀರ್ಪಿನಲ್ಲಿ ಏನಿದೆ? 
* ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಬಹುದೇ ಹೊರತೂ, ತಡೆ ನೀಡುವ ಅಧಿಕಾರ ಸುಪ್ರೀಂಕೋರ್ಟಿಗೆ ಇಲ್ಲ. 
* ರಾಜ್ಯಪಾಲರು ನೀಡಿರುವ ಸೂಚನೆಯಂತೆ ಬಿ.ಎಸ್ ಯಡಿಯೂರಪ್ಪ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಯಾವುದೇ ರೀತಿ ತಡೆ ನೀಡಲು ಸಾಧ್ಯವಿಲ್ಲ. 
* ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯಿಂದ ರಾಜ್ಯಪಾಲ ವಜುಭಾಯಿ ವಾಲ ಅವರಿಗೆ ಸಲ್ಲಿಕೆಯಾಗಿರುವ ಶಾಸಕರ ಬೆಂಬಲ ಪತ್ರ(ಮೇ 15 ಹಾಗೂ 16ರಂದು ನೀಡಿದ್ದು) ವನ್ನು ಗುರುವಾರ ಮಧ್ಯಾಹ್ನ 2ಗಂಟೆಯೊಳಗೆ ಸಲ್ಲಿಸುವಂತೆ ಸೂಚಿಸಿದ ತ್ರಿಸದಸ್ಯ ಪೀಠ.
* ಆದರೆ, ಕಾಂಗ್ರೆಸ್ -ಜೆಡಿಎಸ್ ಸಲ್ಲಿಸಿರುವ ಅರ್ಜಿ ತಿರಸ್ಕೃತಗೊಂಡಿಲ್ಲ. ಈ ಕುರಿತಂತೆ ಕೇಂದ್ರ ಹಾಗೂ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಶುಕ್ರವಾರ ಬೆಳಗ್ಗೆ 10.30ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ.

ಕರ್ನಾಟಕ ವಿಧಾನಸಭೆಯ 224 ಸ್ಥಾನಗಳ ಪೈಕಿ ಮೇ 12 ರಂದು 222 ಸ್ಥಾನಗಳಿಗೆ ಚುನಾವಣೆ ನಡೆದು, ಮೇ 15ರಂದು ಪ್ರಕಟವಾದ ಫಲಿತಾಂಶದ ಪ್ರಕಾರ ಬಿಜೆಪಿ 104, ಕಾಂಗ್ರೆಸ್ 78 ಮತ್ತು ಜೆಡಿಎಸ್ 38 ಮತ್ತು ಇತರರು 2 ಸ್ಥಾನಗಳನ್ನು ಗಳಿಸಿದ್ದರು. ಈ ಮೂಲಕ ಯಾವ ಪಕ್ಷವೂ ಬಹುಮತ ಪಡೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹೊಂದಿ ಸರ್ಕಾರ ರಚನೆಗೆ ಪತ್ರ ಸಲ್ಲಿಸಿದ್ದವು. ಆದರೆ 104 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಗೇ  ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಅವರಿಗೆ ಬುಧವಾರ ಪತ್ರ ಸಲ್ಲಿಸಿದ್ದರು. 

Trending News