ನವದೆಹಲಿ: 17ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ನೂತನ ಸಂಸದರು ಇಂದು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಅವರು ನಾಲ್ಕನೆಯವರಾಗಿ ತಮ್ಮ ಸರದಿ ಬಂದಾಗ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಲೋಕಸಭೆಯಲ್ಲಿ ಕನ್ನಡ ಮೊಳಗಿಸಿದರೆ, 12ನೇಯವರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಮತ್ತೊಬ್ಬ ರಾಜ್ಯದ ಸಂಸದ ಪ್ರಹ್ಲಾದ್ ಜೋಷಿ ಕೂಡಾ ಕನ್ನಡದಲ್ಲಿಯೇ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಲೋಕಸಭಾ ಸದಸ್ಯನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆ. ಈಗ ಕೈಗೊಂಡಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನೆರವೆರಿಸುತ್ತೇನೆಂದು ದೇವರ ಹೆಸರಿನಲ್ಲಿ ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಲೋಕ ಸಭೆಯಲ್ಲಿಂದು ಸಂಸತ್ ಸದಸ್ಯರಾಗಿ ನಾನು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದೆನು.@BJP4India @BJP4Karnataka pic.twitter.com/7DFXSZFdie
— Pralhad Joshi (@JoshiPralhad) June 17, 2019
ಕೇಂದ್ರ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ರೈಲ್ವೆ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದರಾಗಿರುವ ಸುರೇಶ್ ಅಂಗಡಿ ಇಂಗ್ಲೀಷ್ ನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಎಲ್ಲರಿಗೂ ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.