ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೆ ಗುರುವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.
ಮಂಗಳವಾರ ನಡೆದ ತೀವ್ರ ವಾದ ವಿವಾದಗಳ ಬಳಿಕ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ್ದ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು, ಡಿಕೆಶಿ ಅವರ ಆರೋಗ್ಯ ಹದಗೆಟ್ಟಿದ್ದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಅನುಮತಿ ನೀಡಿ, ವಿಚಾರಣೆಯನ್ನು ಇಂದಿಗೆ ಮುಂದೂಡಿದ್ದರು. ಆದರೆ ಇಡಿ ಪರ ವಕೀಲರು ನ್ಯಾಯಾಲಯಕ್ಕೆ ಬಾರದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಸೆ.19ರ ಮಧ್ಯಾಹ್ನ 3 ಗಂಟೆಗೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಇನ್ನೂ ಒಂದು ದಿನ ಡಿ.ಕೆ.ಶಿವಕುಮಾರ್ ಅವರು ನ್ಯಾಯಾಂಗ ಬಂಧನದಲ್ಲಿ ಕಳೆಯುವಂತಾಗಿದೆ. ನಾಳೆಯಾದರೂ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡು ಡಿಕೆಶಿ ಅವರಿಗೆ ಜಾಮೀನು ಸಿಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.