ಮುಂಬೈ: ಕಳೆದ ಕೆಲ ದಿನಗಳಿಂದ ಮುಂಬೈನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬುಧವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ಮುಂಬೈ ಪೊಲೀಸರು ಸೇರಿದಂತೆ ಅಧಿಕಾರಿಗಳು ಜನರಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನೂ ಸಹ ವಾಪಸ್ ಕಳುಹಿಸಲಾಗಿದ್ದು, ಸುರಕ್ಷಿತವಾಗಿ ಮನೆಗೆ ತಲುಪುವ ವ್ಯವಸ್ಥೆ ಮಾಡಲಾಗಿದೆ.
ಇದೇ ವೇಳೆ, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದ್ದು, ಸಮಸ್ಯೆ ಎದುರಾದಲ್ಲಿ ಸಹಾಯವಾಣಿ ಸಂಖ್ಯೆ 1916 ಗೆ ಕರೆ ಮಾಡಲು ಬಿಎಂಸಿಯ ಟ್ವೀಟ್ ನಲ್ಲಿ ತಿಳಿಸಿದೆ.
ಕಳೆದ 24 ಗಂಟೆಗಳಿಂದ ಮುಂಬೈಯಲ್ಲಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಾದ ಸಿಯಾನ್, ಕಿಂಗ್ ಸರ್ಕಲ್ ಮತ್ತು ಪ್ಯಾರೆಲ್ ಪ್ರದೇಶಗಳು ಜಲಾವೃತವಾಗಿವೆ. ಎಳೆದೆ ನೀರು ನಿಂತ ಕಾರಣ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಪಾದಚಾರಿಗಳ ಸಂಚಾರ ಕೂಡ ಅಸ್ತವ್ಯಸ್ತಗೊಂಡಿದೆ.