ನವದೆಹಲಿ: ಅರೇಬಿಯನ್ ಸಮುದ್ರದಲ್ಲಿ 'ಕ್ಯಾರ್ ಚಂಡಮಾರುತ' ರಚನೆಯಿಂದ ಉಂಟಾದ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ರಾಜ್ಯದಲ್ಲಿ ವಿವಿಧ ಪ್ರದೇಶಗಳಲ್ಲಿ ನೀರು ನುಗ್ಗಿದೆ. ಹಲವೆಡೆ ಮರಗಳು ಧರೆಗೆ ಉರುಳಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಗೋವಾದಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ.
ಗೋವಾ ಸರ್ಕಾರ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಗೋವಾ ವಿಶ್ವವಿದ್ಯಾಲಯವು ಶುಕ್ರವಾರ ಮತ್ತು ಶನಿವಾರದಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿದೆ.
"ಕರಾವಳಿ ಜಿಲ್ಲೆಗಳಾದ ಕರ್ನಾಟಕ, ಗೋವಾ ಮತ್ತು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಮುಂದಿನ 24 ಗಂಟೆ ಭಾರೀ ಮಳೆಯಾಗಲಿದೆ" ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಉತ್ತರ ಕರ್ನಾಟಕ ಕರಾವಳಿ ಮತ್ತು ಗುಜರಾತ್ ಕರಾವಳಿಯ ಈಶಾನ್ಯ ಭಾಗಗಳಲ್ಲಿ ಅರೇಬಿಯನ್ ಸಮುದ್ರದಲ್ಲಿ ಎದ್ದಿರುವ 'ಕ್ಯಾರ್ ಚಂಡಮಾರುತದ ಪ್ರಭಾವ ಎದುರಿಸಲಿವೆ ಎಂದು ಐಎಂಡಿ ಹೇಳಿದೆ.
ಮಳೆಯಿಂದಾಗಿ ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ ತಕ್ಷಣ ರಕ್ಷಣೆ ಒದಗಿಸುವಂತೆ ವಿಪತ್ತು ನಿರ್ವಹಣಾ ತಂಡಗಳಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೂಚಿಸಿದ್ದಾರೆ.
ಮುಂದಿನ 48 ಗಂಟೆಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯದ ಮೀನುಗಾರಿಕೆ ಇಲಾಖೆ ನಿರ್ದೇಶನ ನೀಡಿದೆ.