ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ. ಇದು ಎಲ್ಲರಿಗೂ ತಿಳಿದಿರುವ ವಿಷಯವೇ, ಏತನ್ಮಧ್ಯೆ ರಾಹುಲ್ ಒಬಿಸಿ, ಎಸ್ಸಿ/ಎಸ್ಟಿ ನಾಯಕರನ್ನು ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಕೇಳಿಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಹುಲ್ ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವೊಲಿಸಲು ಪಕ್ಷದ ಹಲವು ಸತತವಾಗಿ ಪ್ರಯತ್ನಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಬದಲಿಗೆ ಸಾಧ್ಯವಾದಷ್ಟು ಬೇಗ ಪರ್ಯಾಯ ನಾಯಕರನ್ನು ಆಯ್ಕೆ ಮಾಡಿ ಎಂದಿರುವ ರಾಹುಲ್, ಒಬಿಸಿ, ಎಸ್ಸಿ/ಎಸ್ಟಿ ನಾಯಕರಿಗೆ ಪಕ್ಷದ ಅಧ್ಯಕ್ಷ ಗಿರಿ ನೀಡಲು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದಿತು. ರಾಜಸ್ಥಾನ್, ಗುಜರಾತ್, ಉತ್ತರಾಖಂಡ್, ಹಿಮಾಚಲ ಪ್ರದೇಶ, ದೆಹಲಿ ಮುಂತಾದ ಹಲವು ರಾಜ್ಯಗಳಲ್ಲಿ ಪಕ್ಷವು ಒಂದೇ ಒಂದು ಸ್ಥಾನವನ್ನೂ ಗೆಲ್ಲಲಿಲ್ಲ.
ಚುನಾವಣೆಯಲ್ಲಿ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತ ರಾಹುಲ್ ಗಾಂಧಿ ಕಳೆದ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು. ಅಷ್ಟೇ ಅಲ್ಲದೆ ಗಾಂಧಿ/ನೆಹರು ಕುಟುಂಬದವರನ್ನು ಹೊರತುಪಡಿಸಿ ಬೇರೆಯವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿ ಎಂದು ಸೂಚಿಸಿದ್ದರು.
ಆರ್ಜೆಡಿಯ ಲಾಲು ಪ್ರಸಾದ್ ಯಾದವ್, ಡಿಎಂಕೆನ ಎಂ.ಕೆ. ಸ್ಟಾಲಿನ್ ಮತ್ತು ಜೆಡಿ (ಎಸ್) ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ಹಲವು ನಾಯಕರು ರಾಹುಲ್ ರಾಜೀನಾಮೆ ನೀಡಬಾರದೆಂದು ಕೋರಿದ್ದಾರೆ.