ಅಯೋಧ್ಯೆ ವಿವಾದ: ಸುಪ್ರೀಂಕೋರ್ಟ್‌ನಲ್ಲಿ ಇಂದಿನಿಂದ ವಿಚಾರಣೆ

ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಜಾಗದ ಕುರಿತು ಸಲ್ಲಿಕೆಯಾದ ಅರ್ಜಿಗಳನ್ನು ಜನವರಿ 4ರಂದು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ.

Last Updated : Jan 4, 2019, 08:31 AM IST
ಅಯೋಧ್ಯೆ ವಿವಾದ: ಸುಪ್ರೀಂಕೋರ್ಟ್‌ನಲ್ಲಿ ಇಂದಿನಿಂದ ವಿಚಾರಣೆ title=
File Image

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಜಾಗದ ಕುರಿತು ಸಲ್ಲಿಕೆಯಾದ ಅರ್ಜಿಗಳನ್ನು ಜನವರಿ 4ರಂದು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾ. ಎಸ್.ಕೆ.ಕೌಲ್ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಲಿದ್ದು, ಕಳೆದ ಅಕ್ಟೋಬರ್ ನಲ್ಲೇ ತ್ವರಿತವಾಗಿ ವಿಚಾರಣೆ ನಡೆಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

ಆದರೆ ಯಾವ ಪ್ರಕರಣಕ್ಕೆ ಎಷ್ಟು ಮಹತ್ವ ನೀಡಬೇಕು ಎಂಬುದು ನ್ಯಾಯಾಲಯಕ್ಕೆ ಗೊತ್ತು ಎಂದಿದ್ದ ಸುಪ್ರೀಂ ಕೋರ್ಟ್ ಜನವರಿ 4 ರಿಂದ ವಿಚಾರಣೆ ಮಾಡುವುದಾಗಿ ಹೇಳಿತ್ತು.

2010ರಲ್ಲಿ ಈ ವಿವಾದದ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್ ಈ 2.77 ಎಕರೆ ವಿವಾದಿತ ಪ್ರದೇಶವನ್ನು ರಾಮಲಲ್ಲಾ, ಸುನ್ನಿ ವಕ್ಫ್ ಬೋರ್ಡ್ ಮತ್ತು ನಿರ್ಮೋಹಿ ಅಖರ ಈ ಮೂವರಿಗೆ ಸಮನಾಗಿ ಹಂಚಿಕೆ ಮಾಡಿ ತೀರ್ಪು ಕೊಟ್ಟಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸಾಕಷ್ಟು ಮೇಲ್ಮನವಿಗಳು ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ಅಂತಿಮ ಹಂತದ ವಿಚಾರಣೆ ನಡೆಸಬೇಕಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮುರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ಪೀಠ ವಿಚಾರಣೆಯನ್ನು ಜನವರಿಗೆ ಮುಂದೂಡಿತ್ತು.

ವಿವಾದ ಸಂಬಂಧದ ವಿಚಾರಣೆ ಜನವರಿಗೆ ಮುಂದೂಡಲ್ಪಟ್ಟ ಬೆನ್ನಲ್ಲೇ ರಾಮಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ಕೇಂದ್ರದ ಮೇಲೆ ಒತ್ತಡಗಳು ಹೆಚ್ಚಾಗುತ್ತಾ ಬಂದಿದ್ದವು. ಅಲ್ಲದೆ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನು ಜಾರಿ ಮಾಡಲು ಸರ್ಕಾರವನ್ನು ಒತ್ತಾಯಿಸಿದ್ದವು. ಈ ವಿಚಾರ ಬಿಜೆಪಿ ಹಾಗೂ ಶಿವಸೇನೆ ನಡುವೆ ವಾಕ್ಸಮರಕ್ಕೆ ಸಹ ಕಾರಣವಾಗಿತ್ತು.

ಸಂವಿಧಾನದ ಪ್ರಕಾರವೇ ರಾಮಮಂದಿರ ನಿರ್ಮಾಣ: 2019ರ ಮೊದಲ ಸಂದರ್ಶನದಲ್ಲಿ ಪ್ರಧಾನಿ ಮೋದಿ

2019ರ ಮೊದಲ ಸಂದರ್ಶನದಲ್ಲಿ ಅಯೋಧ್ಯೆ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್‌ನಲ್ಲಿ ರಾಮಮಂದಿರ ವಿವಾದ ಕುರಿತು ಎಲ್ಲಾ ಪ್ರಕ್ರಿಯೆಗಳೂ ಪೂರ್ಣಗೊಂಡ ನಂತರವಷ್ಟೇ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. 

ನ್ಯಾಯಾಲಯದ ವಿಚಾರಣೆಯ ವೇಳೆ ಕಾಂಗ್ರೆಸ್ ವಕೀಲರು ನ್ಯಾಯಾಲಯದಲ್ಲಿ ಅಡ್ಡಿಯುಂಟು ಮಾಡುತ್ತಿದ್ದಾರೆ ಹಾಗಾಗಿ ನ್ಯಾಯಾಂಗ ಪ್ರಕ್ರಿಯೆ ನಿಧಾನವಾಗಿದೆ ಎಂದಿರುವ ಅವರು, ಸಂವಿಧಾನದ ಪ್ರಕಾರವೇ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುವುದು. ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಇಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುವುದು ಎಂದು ಪ್ರಧಾನಿ ತಿಳಿಸಿದ್ದರು.
 

Trending News