ನವದೆಹಲಿ: ಸುನೀಲ್ ಅರೋರಾ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೋಮವಾರದಂದು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಒ.ಪಿ. ರಾವತ್ ಅವರ ಅಧಿಕಾರಾವಧಿ ಡಿಸೆಂಬರ್ 1ಕ್ಕೆ ಕೊನೆಗೊಳ್ಳುತ್ತಿದ್ದು, ಡಿಸೆಂಬರ್ 2 ರಂದು ಆರೋರಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
1980ರ ರಾಜಸ್ಥಾನ ಕೇಡರ್ಸ್ ನ ಹಿರಿಯ ಅಧಿಕಾರಿಯಾಗಿರುವ ಸುನೀಲ್ ಅರೋರಾ ಪ್ರಸ್ತುತ ಚುನಾವಣಾ ಆಯೋಗದಲ್ಲಿ ಹಿರಿಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅರೋರ ಅವರು ಹಣಕಾಸು, ಜವಳಿ ಮತ್ತು ಯೋಜನೆ ಆಯೋಗದಂತಹ ಸಚಿವಾಲಯ ಮತ್ತು ಇಲಾಖೆಗಳಲ್ಲಿ ವಿವಿಧ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 1999-2002ರ ಅವಧಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಅವರು ಕಾರ್ಯ ನಿರ್ವಹಿಸಿದ್ದಾರೆ. ಭಾರತೀಯ ವಿಮಾನಯಾನ ಸಂಸ್ಥೆಯಲ್ಲಿ ಐದು ವರ್ಷಗಳ ಕಾಲ ಅರೋರಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸಹ ಕಾರ್ಯ ನಿರ್ವಹಿಸಿದ್ದರು.
ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಜಮ್ಮು ಕಾಶ್ಮೀರದಲ್ಲಿ ನಡೆಯಬೇಕಿರುವ ಚುನಾವಣೆ, ಮುಂಬರುವ ಲೋಕಸಭಾ ಚುನಾವಣೆಗೆ ಸುನೀಲ್ ಅರೋರಾ ಅವರೇ ಮುಖ್ಯ ಚುನಾವಣಾ ಆಯುಕ್ತರಾಗಿ ಕಾರ್ಯ ನಿರ್ವಹಿಸುವ ಸಾಧ್ಯತೆ ಇದೆ.