ಬೆಂಗಳೂರು: ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ರಾಜ್ಯವನ್ನು ಕಡೆಗಣಿಸಿರುವ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ಸರ್ವ ಪಕ್ಷ ಸಭೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕದ ಪ್ರತಿನಿಧಿ ಇಲ್ಲದೆ, ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಸರ್ಕಾರದ ನಿರ್ಣಯದ ಕುರಿತು ಸರ್ವ ಪಕ್ಷ ಸಭೆ ಕರೆಯುವ ನಿರ್ಧಾರ ಕೈಗೊಳ್ಳಲಾಗಿದೆ. ಕಾವೇರಿ ಸಮಿತಿ ರಚನೆ ವಿಚಾರವಾಗಿ ಕಾನೂನು ಹೋರಾಟದ ಜೊತೆಗೆ ಸರ್ಕಾರದ ಮುಂದಿನ ನಡೆ ಇನ್ನೆರಡು ದಿನಗಳಲ್ಲಿ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು, ಕಾವೇರಿ ವಿವಾದದ ಬಗ್ಗೆ ಜೂನ್ 18 ರಂದೇ ಪ್ರಧಾನಿಗೆ ಪತ್ರ ಬರೆಯಲಾಗಿತ್ತು. ಅವರ ಸಭೆ ಕರೆದು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ ಜೂ.23ರಂದು ರಾಜ್ಯದ ಪ್ರತಿನಿಧಿಗಳಿಲ್ಲದೆ, ರಾತ್ರೋರಾತ್ರಿ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಹಾಗಾಗಿ ಕಾವೇರಿ ವಿಷಯದಲ್ಲಿ ರಾಜ್ಯದ ಹಿತ ಕಾಪಾಡಲು ನಾವು ಏನೆಲ್ಲಾ ಪ್ರಯತ್ನ ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.