ಬೆಂಗಳೂರು: ಕೇಂದ್ರ ಸರ್ಕಾರ ಪ್ರಕಟಿಸಿರುವ ‘ಆಯುಷ್ಮಾನ್ ಭಾರತ ‘ ಕಾರ್ಯಕ್ರಮ ಹಾಗೂ ರಾಜ್ಯ ಸರ್ಕಾರದ ‘ಆರೋಗ್ಯ ಕರ್ನಾಟಕ’ ಯೋಜನೆಯನ್ನು ವಿಲೀನಗೊಳಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
‘ಆಯುಷ್ಮಾನ್ ಭಾರತ’ ಯೋಜನೆಯಲ್ಲಿರುವ ಹಲವಾರು ಲೋಪದೋಷಗಳ ಬಗ್ಗೆ ರಾಜ್ಯ ಸರ್ಕಾರ ಕೋರಿದ ಮಾಹಿತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಠನೆ ನೀಡಿರುತ್ತಾರೆ. ರಾಜ್ಯ ಸರ್ಕಾರದ ವಿವಿಧ ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವೈದ್ಯಕೀಯ ಸಂಘಟನೆಗಳ ಮುಖ್ಯಸ್ಥರೊಂದಿಗೆ ಬುಧವಾರ ಚರ್ಚಿಸಿ ಅವರ ಅಭಿಪ್ರಾಯವನ್ನು ಪಡೆಯಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದೆಂದು ಕುಮಾರಸ್ವಾಮಿ ಹೇಳಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು , ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರು, ಬೆಂಗಳೂರು ಮೆಡಿಕಲ್ ಕಾಲೇಜ್ನ ಮುಖ್ಯಸ್ಥರು, ಬೌರಿಂಗ್ ಮತ್ತು ಲೇಡಿ ಕರ್ಝನ್ ಆಸ್ಪತ್ರೆ, ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕರುಗಳೂ ಸೇರಿದಂತೆ ಖಾಸಗಿ ಹಾಗೂ ಸ್ವಾಯತ್ತ ಆರೋಗ್ಯ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.