ನವದೆಹಲಿ: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆಯಾಗಿರುವುದನ್ನು ಖಂಡಿಸಿ ಸಂಸತ್ತಿನ ಗಾಂಧಿ ಪ್ರತಿಮೆಯ ಮುಂದೆ ರಾಜ್ಯ ಬಿಜೆಪಿ ಸಂಸದರ ನಿಯೋಗದಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಬಗ್ಗೆ ಮಾತನಾಡಿರುವ ಸಂಸದೆ ಶೋಭಾ ಕರಂದ್ಲಾಜೆ ಕೇರಳದ ಮಾದರಿಯಲ್ಲೇ ಕರ್ನಾಟಕದಲ್ಲೂ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ. ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದರೆ ಹೀಗೆ ಆಗುತ್ತಿರಲಿಲ್ಲ. ದೀಪಕ್ ರಾವ್ ಹತ್ಯೆಯಲ್ಲಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾದ ಕುಮ್ಮಕ್ಕಿದೆ ಎಂದು ಆರೋಪಿಸಿದ್ದಾರೆ.
ಸಂಸದ ಪ್ರಹ್ಲಾದ್ ಜೋಶಿ ಈ ಬಗ್ಗೆ ಪ್ರತಿಕ್ರಿಯಿಸುತ್ತಾ, ನಾನು ನೇರವಾಗಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆರೋಪಿಸುತ್ತೇನೆ. ಸಿಎಂ ಕೇರಳ ಮಾದರಿಯನ್ನು ಅನುಸರಿಸುತ್ತಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿ ಬಿಜೆಪಿ ಮಣಿಸುವ ತಂತ್ರ ಅನುಸರಿಸಲಾಗುತ್ತಿದೆ ಎಂದು ಹೇಳಿದರು. ಜೊತೆಗೆ ಈ ಹತ್ಯೆ ಕುರಿತಂತೆ ಎನ್ ಐ ಎ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಷಿ, ಸಿ.ಎಂ. ಉದಾಸಿ, ಪ್ರತಾಪ್ ಸಿಂಹ, ಸುರೇಶ್ ಅಂಗಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.