ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಸ್ಪರ್ಧೆಗೆ ಸಿದ್ಧತೆ ನಡೆಸಿರುವ ಬಿಜೆಪಿ ನಾಯಕ ಶರತ್ ಬಚ್ಚೆಗೌಡ ಜೊತೆ ಮಾತುಕತೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭರವಸೆ ನೀಡಿದ್ದು, ಅನರ್ಹ ಶಾಸಕ ಎಂಟಿಬಿ ನಾಗರಾಜ್ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ಯಾವುದೇ ಕಾರಣಕ್ಕೂ ಹೊಸಕೋಟೆ ಉಪಚುನಾವಣಾ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಸ್ಪಷ್ಟಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಭುಗಿಲೆದ್ದಿರುವ ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶರತ್ ಬಚ್ಚೇಗೌಡ ಜೊತೆ ಮಾತುಕತೆ ನಡೆಸಲಾಗುವುದು. ಮಾತುಕತೆ ಮೂಲಕ ಬಂಡಾಯ ಶಮನಗೊಳಿಸಲಾಗುವುದು ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಇದರಿಂದಾಗಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಮತ್ತೆ ಮಂತ್ರಿಯಾಗುವ ನಾಗರಾಜ್ ಆಸೆಗೆ ತಣ್ಣೀರೆರಚಿದಂತಾಗಿತ್ತು. ಇದೀಗ ಶರತ್ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರೇ ಮುಂದಾಗಿರುವುದರಿಂದ ಎಂಟಿಬಿ ನಾಗರಾಜ್ಗೆ ನಿಟ್ಟುಸಿರುಬಿಡುವಂತಾಗಿದೆ.