ದಂಗೆ ಹೇಳಿಕೆ: ಸಿಎಂ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ಬಿಜೆಪಿ ವಿರುದ್ಧ ದಂಗೆ ಏಳುವಂತೆ ಜನತೆಗೆ ಕರೆ ನೀಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದೂರು ಸಲ್ಲಿಸಿದೆ. 

Last Updated : Sep 21, 2018, 06:16 PM IST
ದಂಗೆ ಹೇಳಿಕೆ: ಸಿಎಂ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು title=

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಮಾಡಿದರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಜನತೆಗೆ ಕರೆ ನೀಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಿಯೋಗ ಶುಕ್ರವಾರ ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದೂರು ಸಲ್ಲಿಸಿದೆ. 

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿ, ಚರ್ಚೆ ನಡೆಸಿದ ಬಿಜೆಪಿ ನಾಯಕರು, ಗುರುವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೀಡಿದ್ದ ದಂಗೆ ಹೇಳಿಕೆ ಬಗ್ಗೆ ವಿವರಣೆ ನೀಡಿದರು. ಜತೆಗೆ ಯಡಿಯೂರಪ್ಪ ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ ಬಗ್ಗೆಯೂ ವಿವರಿಸಿದ ಬಿಜೆಪಿ ನಾಯಕರು, ಕೂಡಲೇ ಸಿಎಂ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು 
ದೂರು ನೀಡಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮುಖ್ಯಮಂತ್ರಿಯೊಬ್ಬರು ಜನತೆಗೆ ದಂಗೆ ಏಳುವಂತೆ ಕಡೆ ನೀಡುವುದಾಗಿ ಹೇಳಿಕೆ ನೀಡಿರುವುದು ರಾಜ್ಯದಲ್ಲಿ ಇದೇ ಮೊದಲು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ರಾಗ, ದ್ವೇಷ ಇಲ್ಲದೇ ಆಡಳಿತ ಮಾಡುತ್ತೇನೆ ಎಂದಿದ್ದರು. ಆದರೀಗ ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ  ಸಂವಿಧಾನದ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ಯೋಗ್ಯತೆ ಇಲ್ಲ ಎಂದು ಹೇಳಿದರು.

ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಸಂಸದ ಪಿ.ಸಿ.ಮೋಹನ್, ಅರವಿಂದ ಲಿಂಬಾವಳಿ, ಸೋಮಣ್ಣ, ರೇಣುಕಾಚಾರ್ಯ ಸೇರಿದಂತೆ ಇತರ ನಾಯಕರು ಬಿಜೆಪಿ ನಿಯೋಗದಲ್ಲಿದ್ದರು.

ಡಿಜಿಪಿ ಅವರಿಗೂ ದೂರು ಸಲ್ಲಿಕೆ
ಇದಕ್ಕೂ ಮುನ್ನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿ ಅಭಿವೃದ್ಧಿಗೆ ಅಡಚಣೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಜನರು ದಂಗೆ ಏಳಬೇಕು ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಿಯೋಗ ಡಿಜಿಪಿ ನೀಲಮಣಿ ರಾಜು ಅವರಿಗೂ ದೂರು ಸಲ್ಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ. 

Trending News