ಹಳ್ಳಿಗಳಿಗೆ ಹಿಂತಿರುಗುವ ವಲಸೆ ಕಾರ್ಮಿಕರಿಗೆ ಮನ್ರೇಗಾ ಯೋಜನೆಯಡಿ ಕೆಲಸ ಕೊಡಿ: ಯಡಿಯೂರಪ್ಪ

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಇರುವ 14 ಜಿಲ್ಲೆಗಳಲ್ಲಿ 659 ಗ್ರಾಮಗಳಲ್ಲಿ 389 ಟ್ಯಾಂಕರ್ ಮತ್ತು 706 ಖಾಸಗಿ ಬೋರ್ ವೆಲ್ ಗಳಿಂದ ನೀರು ಪೂರೈಕೆ ಆಗುತ್ತಿದೆ.

Last Updated : May 20, 2020, 02:13 PM IST
ಹಳ್ಳಿಗಳಿಗೆ ಹಿಂತಿರುಗುವ ವಲಸೆ ಕಾರ್ಮಿಕರಿಗೆ ಮನ್ರೇಗಾ ಯೋಜನೆಯಡಿ ಕೆಲಸ ಕೊಡಿ: ಯಡಿಯೂರಪ್ಪ title=

ಬೆಂಗಳೂರು: ಕೋವಿಡ್ 19 ಕೊರೊನಾವೈರಸ್ (Coronavirus)  ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣಕ್ಕೆ ವಲಸಿಗ ಕಾರ್ಮಿಕರು ಬಹಳ ಸಂಖ್ಯೆಯಲ್ಲಿ ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದು, ಅವರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa)  ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, 2020-21ನೇ ಸಾಲಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 13 ಕೋಟಿ ಮಾನವ ದಿನಗಳ ಸೃಜನೆಯ ಗುರಿ ಹಾಗೂ 6315.79 ಕೋಟಿ ರೂ. ಅನುದಾನ ನಿಗದಿ ಪಡಿಸಲಾಗಿದೆ. ಇದಲ್ಲದೆ ಕೇಂದ್ರ ಸರ್ಕಾರವೂ ಉದ್ಯೋಗ ಖಾತರಿ ಯೋಜನೆಗೆ 40 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ನಿಗದಿ ಪಡಿಸಿರುವ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ಉದ್ಯೋಗ ದೊರೆಯುವಂತೆ ಹಾಗೂ ನಿಗದಿತ ಅವಧಿಯಲ್ಲಿ ವೇತನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

 ಕೋವಿಡ್ -19 (Covid-19)   ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಜನ ಜಾಗೃತಿ ಮೂಡಿಸುವುದು  ಲಾಕ್‌ಡೌನ್‌ (Lockdown)ಅವಧಿಯಲ್ಲಿ ಅಗತ್ಯ ವಸ್ತುಗಳ ಮನೆ ಬಾಗಿಲಿಗೆ ವಿತರಣೆ, ಸೌಲಭ್ಯಗಳ ವಿತರಣೆ, ಮನೆ ಮನೆ ಭೇಟಿ ನೀಡಿ ಹೋಮ್ ಕ್ವಾರಂಟೈನ್ ಪರಿಶೀಲನೆ, ದೈನಂದಿನ ಮಾಹಿತಿ ಸಂಗ್ರಹ, ಸಾಂಸ್ಥಿಕ ಕ್ವಾರಂಟೈನ್ ನಿರ್ವಹಣೆ ಮೇಲ್ವಿಚಾರಣೆ ವಹಿಸುತ್ತಿದೆ. ಇದಲ್ಲದೆ, ಸ್ವಸಹಾಯ ಸಂಘಗಳು 8 ಲಕ್ಷ ಮಾಸ್ಕ್ ತಯಾರಿಸಿ ವಿತರಿಸುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯವಾಗಿರುವ ಕುರಿತು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಕುಡಿಯುವ ನೀರಿಗೆ ಆದ್ಯತೆ:
ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ (Drinking Water) ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಿದರು. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಇರುವ 14 ಜಿಲ್ಲೆಗಳಲ್ಲಿ 659 ಗ್ರಾಮಗಳಲ್ಲಿ 389 ಟ್ಯಾಂಕರ್ ಮತ್ತು 706 ಖಾಸಗಿ ಬೋರ್ ವೆಲ್ ಗಳಿಂದ ನೀರು ಪೂರೈಕೆ ಆಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ, ರಾಜ್ಯ ಸರ್ಕಾರದ ಜಲಧಾರೆ ಯೋಜನೆ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Trending News