ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಕೈಗೊಂಡ ಕಾರ್ಯಕ್ರಮಗಳ ವಿವರಣೆ ನೀಡಿದ ಸಿಎಂ ಸಿದ್ದರಾಮಯ್ಯ

     

Last Updated : Nov 23, 2017, 02:47 PM IST
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಕೈಗೊಂಡ   ಕಾರ್ಯಕ್ರಮಗಳ ವಿವರಣೆ ನೀಡಿದ ಸಿಎಂ ಸಿದ್ದರಾಮಯ್ಯ title=

ಬೆಳಗಾವಿ : ಕಳೆದ 7 ದಿನಗಳಿಂದ ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಳೆದ ೪ ವರ್ಷಗಳಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು. 

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಸುವರ್ಣಸೌಧವನ್ನು ನಿರ್ಮಿಸಿ, ೧ ಅಧಿವೇಶನವನ್ನು ಇಲ್ಲಿ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ 2017-18ನೇ ಸಾಲಿನಲ್ಲಿ ರೂ.3000 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ರೂ.1438 ಕೋಟಿ ಬಿಡುಗಡೆ ಮಾಡಿ ರೂ.733 ಕೋಟಿ ವೆಚ್ಚ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ವೆಚ್ಚದ ಪ್ರಮಾಣ ಕಡಿಮೆ ಆಗಿದ್ದರೂ ಸಹ ಆರ್ಥಿಕ ವರ್ಷದ ಅಂತ್ಯದೊಳಗೆ ಪೂರ್ಣ ಅನುದಾನವನ್ನು ಬಳಕೆ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಕುಡಿಯುವ ನೀರು ಯೋಜನೆ ಮತ್ತು ಕಿರು ನೀರು ಸರಬರಾಜು ಯೋಜನೆ

ನಮ್ಮ ಸರ್ಕಾರವು ಇಲ್ಲಿಯವರೆಗೆ ರಾಜ್ಯದಲ್ಲಿ 234 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ರೂ.2271.86 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಿದ್ದು, ಅದರಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 163 ಯೋಜನೆಗಳನ್ನು ರೂ.1466.93 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲಾಗಿದೆ ಎಂದು ಸಿದ್ದರಾಮಯ್ಯ ವಿವರಿಸಿದರು. 

ರಾಜ್ಯದಲ್ಲಿ 10,150 ಕಿರು ನೀರು ಸರಬರಾಜು ಯೋಜನೆಗಳು ಅನುಷ್ಠಾನಗೊಂಡಿದ್ದು, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 6,573 ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದ್ದು, ಕಳೆದ 4 ವರ್ಷಗಳಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳಿಗಾಗಿ ರಾಜ್ಯದಲ್ಲಿ ರೂ.9291 ಕೊಟಿ ವೆಚ್ಚ ಮಾಡಿದ್ದು, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ರೂ.4718 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು. 

ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ 
ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಈವರೆಗೆ ರಾಜ್ಯದಲ್ಲಿ ಒಟ್ಟು4501.47 ಕೋಟಿ  ರೂ.ಗಳಲ್ಲಿ 9545 ಕಿ.ಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ರೂ.2101.26 ಕೋಟಿ ವೆಚ್ಚ ಮಾಡಿ 4576.45 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲಾಗಿದೆ ಎಂದರು. 

ಬಯಲು ಶೌಚ ಮುಕ್ತ ಜಿಲ್ಲೆ
ಮಾರ್ಚ್-2018ರ ಅಂತ್ಯದೊಳಗೆ ಉತ್ತರ ಕರ್ನಾಟಕ ಜಿಲ್ಲೆಗಳನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲು ಗುರಿ ನಿಗದಿಪಡಿಸಲಾಗಿದ್ದು, ಈ ಯೋಜನೆಯಡಿ ಕಳೆದ 5 ವರ್ಷಗಳಲ್ಲಿ ಲಭ್ಯವಿದ್ದ 3224.13 ಕೋಟಿ ರೂ.ಗಳ ಪೈಕಿ 2879 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.  ಅದರಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಿಗೆ 1267 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. 

ಪ್ರಥಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ
ದೇಶದಲ್ಲೇ ಪ್ರಪ್ರಥಮವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಿ, 5 ಸ್ನಾತಕೋತ್ತರ ಕಲಿಕೆ ಪ್ರಾರಂಭಿಸಲಾಗಿದೆ. ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರಗಳನ್ನು ತಲಾ 7.05 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ, ಧಾರವಾಡದಲ್ಲಿ ನಿರ್ಮಿಸಲಾಗುತ್ತಿದೆ ಎಂದರು. 

ಕೃಷ್ಣ ಮೇಲ್ದಂಡೆ ಯೋಜನೆಯ 3ನೇ ಹಂತ ಸೇರಿದಂತೆ ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಸುಮಾರು 18 ಯೋಜನೆಗಳನ್ನು ಅನುಷ್ಠಾನಗೊಲಿಸಲಾಗುತ್ತಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಸುಮಾರು 47 ಹೊಸ ಯೋಜನೆಗಳನ್ನು ರೂಪಿಸಿದ್ದು, ಅದನ್ನು ಪೂರ್ಣಗೊಳಿಸಲು ಸುಮಾರು 70,000 ಕೋಟಿ ರೂ. ಹಣ ಬೇಕಾಗಬಹುದೆಂದು ಅಂದಾಜಿಸಲಾಗಿದೆ ಎಂದರು. 

ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ 1,12,974 ಕೃಷಿ ಹೊಂಡಗಳನ್ನು ಹಾಗೂ 961 ಪಾಲಿಹೌಸ್/ನೆರಳುಪರದೆ ಮನೆ ಘಟಕಗಳನ್ನುನಿರ್ಮಿಸಿ ಒಟ್ಟು 913.68 ಕೋಟಿ ರೂ. ವಿನಿಯೋಗಿಸಲಾಗಿದ್ದು, 2.965 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ರೂ.619 ಕೋಟಿ ಅನುದಾನದ ವೆಚ್ಚ ಭರಿಸಲಾಗಿರುತ್ತದೆ ಎಂದು ಹೇಳಿದರು. 

Trending News