ನವದೆಹಲಿ: ಈ ಬಾರಿಯ ಚುನಾವಣೆಯಲ್ಲೂ ಗೆದ್ದು ಮತ್ತೊಂದು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷ, ಅಭ್ಯರ್ಥಿಗಳ ಆಯ್ಕೆಯ ವಿಷಯದಲ್ಲಿ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಸೋಮವಾರದಿಂದ ದೆಹಲಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತಿನಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕರ ಸ್ಕ್ರೀನಿಂಗ್ ಕಮಿಟಿ ಸಭೆ ಮೂರನೇ ದಿನವಾದ ಇಂದೂ ಸಹ ಮುಂದುವರೆದಿದೆ.
ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆ ನಡೆಯುತ್ತಿದ್ದು, ಕಳೆದ ಎರಡು ದಿನಗಳಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರಿಂದ ಮಾಹಿತಿ ಪಡೆದಿರುವ ಮಿಸ್ತ್ರಿ ಇಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಅವರಿಂದ ಕ್ಷೇತ್ರವಾರು ಅಭಿಪ್ರಾಯ ಸಂಗ್ರಹದಲ್ಲಿ ತೊಡಗಿದ್ದಾರೆ. ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸಹ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಒಂದೊಂದೇ ಕ್ಷೇತ್ರಗಳ ಬಗ್ಗೆ ಅವಲೋಕನ ನಡೆಸಲಾಗುತ್ತಿದ್ದು, ಈಗಾಗಲೇ 140 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 14ರೊಳಗೆ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಒಟ್ಟಿಗೆ ಬಿಡುಗಡೆ ಮಾಡುವ ನಿರೀಕ್ಷೆ ಇದೆ.