ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಸಾಕಷ್ಟು ದಿನಗಳೇ ಕಳೆದರೂ ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಭುಗಿಲೆದ್ದಿರುವ ಅಸಮಾಧಾನ ಇನ್ನೂ ತಣ್ಣಗಾಗಿಲ್ಲ. ಈ ಬೆನ್ನಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಆರಂಭವಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ಹಿನ್ನೆಲೆಯಲ್ಲಿ ತೆರವಾಗಲಿರುವ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ದಲಿತ ನಾಯಕ ಕೆ.ಹೆಚ್.ಮುನಿಯಪ್ಪ ಅಥವಾ ಬಿ.ಕೆ.ಹರಿಪ್ರಸಾದ್ ಅವರಿಗೆ ನೀಡಬೇಕೆಂದು ಪ್ರಯತ್ನ ನಡೆಸಿದ್ದರೆ, ಮತ್ತೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರಿಗೆ ನೀಡಬೇಕೆಂದು ಕೆಲ ಕಾಂಗ್ರೆಸ್ ನಾಯಕರು ಹೈಕಮ್ಯಾಂಡ್'ಗೆ ಒತ್ತಾಯಿಸಿದ್ದಾರೆ.
ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರ ಪ್ರವಾಸದಲ್ಲಿದ್ದು, ಅವರು ಹಿಂದಿರುಗಿದ ನಂತರ ಈ ಬಗ್ಗೆ ಮುಂದಿನ ಚರ್ಚೆ ನಡೆಸಲು ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.