ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಹಲ್ಲೆ ನಡೆಸಿದ ಆರೋಪದಲ್ಲಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ನ್ಯಾಯಾಂಗ ಬಂಧನದ ಅವಧಿಯನ್ನು ಏ.28ರ ವರೆಗೆ ಕೋರ್ಟ್ ವಿಸ್ತರಿಸಿದೆ.
ಮಂಗಳವಾರ ನಲಪಾಡ್ ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ವಿಚಾರಣೆ ನಡೆಸಿದ 1ನೇ ಎಸಿಎಂಎಂ ನ್ಯಾಯಾಲಯ, ಈ ಪ್ರಕರಣದ ಆರೋಪಿಗಳಾದ ನಲಪಾಡ್ ಮತ್ತು ಆತನ ಸಹಚರರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 28ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದು, ನಲಪಾಡ್ ಜಾಮೀನು ಅರ್ಜಿಯನ್ನೂ ಸಹ ನ್ಯಾಯಾಲಯ ವಜಾಗೊಳಿಸಿದೆ.
ಫೆ.17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕಾರಣಕ್ಕೆ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಮತ್ತು ಆತನ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ನಂತರ ತಲೆಮರೆಸಿಕೊಂಡಿದ್ದ ನಲಪಾಡ್ ಫೆ.19ರಂದು ಪೊಲೀಸರಿಗೆ ಶರಣಾಗಿದ್ದರು.