ಬೆಂಗಳೂರು: ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸದೇ ನಷ್ಟವನ್ನು ಸರಿದೂಗಿಸಲು ಪರ್ಯಾಯ ಮಾರ್ಗವನ್ನು ಕಂಡುಕೊಳ್ಳುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚಿಸಿದರು.
ಶುಕ್ರವಾರ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸಿಎಂ ಕುಮಾರಸ್ವಾಮಿ ಅವರು ದರ ಏರಿಕೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು. ಡೀಸೆಲ್ ದರ ಏರಿಕೆಯಿಂದಾಗಿ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ತೈಲ ದರ ಲೀಟರ್‌ಗೆ 58 ರೂ. ಇದ್ದ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಏರಿಕೆಯಾಗಿತ್ತು. ಅಲ್ಲಿಂದ ಈವರೆಗೆ ಏರಿಕೆ ಆಗಿಲ್ಲ. ಇದರಿಂದ ಸಾರಿಗೆ ನಿಗಮಗಳು ಸುಮಾರು 3 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಅನುಭವಿಸಿವೆ. ಆದರೂ ಸಾರ್ವಜನಿಕರಿಗೆ ಹೊರೆಯಾಗುವುದನ್ನು ತಪ್ಪಿಸಲು ಸದ್ಯಕ್ಕೆ ಬಸ್ ದರ ಏರಿಕೆ ಬೇಡ ಎಂದು ತೀರ್ಮಾನಿಸಲಾಗಿದೆ. ಬಸ್ ದರ ಹೆಚ್ಚಿಸುವ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ತಿಳಿಸಿದರು.
ಸಾರಿಗೆ ಇಲಾಖೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ರಾಜಸ್ವ ಸಂಗ್ರಹಣೆಯಲ್ಲಿ 131 ಕೋಟಿ ರೂ. ಹೆಚ್ಚಳವಾಗಿದ್ದು , ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಪ್ರಯಾಣಿಕರ ಆಶಯಗಳನ್ನು ಅರ್ಥೈಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಯವರು ಸೂಚಿಸಿದರು.
ಪ್ರಯಾಣಕರಿಗೆ ಬಸ್ ಸೌಲಭ್ಯ ಮಾತ್ರವಲ್ಲದೆ ಅವರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸಲು ಕ್ರಮ ಕೈಗೊಳ್ಳಬೇಕೆಂದು ಸಿಎಂ ಸೂಚಿಸಿದರು. ಪ್ರಯಾಣಿಕರಿಗೆ ಹೊರೆಯಾಗದಂತೆ ಇಲಾಖೆಯ ನಷ್ಟವನ್ನು ಸರಿದೂಗಿಸಲು ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಇದಲ್ಲದೆ ಬೆಂಗಳೂರು ನಗರದಲ್ಲಿ ಬಿಎಂಟಿಸಿ ಮತ್ತು ಮೆಟ್ರೊ ರೈಲು ಮಧ್ಯೆ ಸಮನ್ವಯ ಸಾಧಿಸುವತ್ತ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.