ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಏಳ್ಗೆಗೆ ಸರಕಾರದಿಂದ ಎಸ್‌ಸಿ, ಎಸ್‌ಸಿಪಿ, ಟಿಎಸ್‌ಪಿ ಅಡಿಯಲ್ಲಿ ಮೀಸಲಿಡುವ ಹಣವನ್ನು ಆ ಸಮುದಾಯದವರ ಅಭಿವೃದ್ಧಿಗೇ ಬಳಸಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಐದು ವರ್ಷದಲ್ಲಿ ಎಸ್‌ಸಿ, ಎಸ್‌ಟಿ ಅವರಿಗಾಗಿ ಸಾಕಷ್ಟು ಅನುದಾನವನ್ನು ಸರಕಾರ ನೀಡಿದೆ, ಇದರ ಸದ್ಭಳಕೆಯಾಗಬೇಕು. ಕೆಲವೆಡೆ ಈ ಹಣವನ್ನು ಇತರೆ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಎಸ್‌ಸಿ, ಎಸ್‌ಟಿ ಮಕ್ಕಳು, ಜನಾಂಗದವರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಈ ಯೋಜನೆಗಳು ಅವರಿಗೆ ತಲುಪುತ್ತಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ಮಾಡುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಪಿಡಬ್ಲ್ಯೂಡಿ ಸಚಿವ ಎಚ್.ಡಿ. ರೇವಣ್ಣ ಉಪಸ್ಥಿತರಿದ್ದರು.