ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಅಸ್ತು

ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿದ ಕೂಡಲೇ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ ಕೇಂದ್ರ ಭೂಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ.

Last Updated : Dec 27, 2018, 07:47 AM IST
ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಅಸ್ತು title=

ನವದೆಹಲಿ: ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಿಸುವ ಕುರಿತು ಕೇಂದ್ರ ಭೂಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರು ಸಮ್ಮತಿಸಿದ್ದು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿದ ಕೂಡಲೇ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬುಧವಾರ ಕೇಂದ್ರ ಭೂ ಹೆದ್ದಾರಿ ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಗೋವಾ ರಾಜ್ಯಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 4 ಎ ಪ್ರಸ್ತುತ ಎರಡು ಪಥಗಳದ್ದಾಗಿದ್ದು ಇದರ ಅಗಲೀಕರಣಕ್ಕಾಗಿ ಮುಂದಿನ 18 ತಿಂಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಳಸಬಹುದಾದ ಪರ್ಯಾಯ ಸಂಪರ್ಕ ಮಾರ್ಗಗಳ ಅಭಿವೃದ್ಧಿಯನ್ನು ಈ ಯೋಜನೆಯಡಿಯಲ್ಲಿಯೇ ಕೈಗೆತ್ತಿಕೊಳ್ಳುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಮನವಿ ಮಾಡಿದರು.

ಇದಲ್ಲದೆ ಈ ಸಂದರ್ಭದಲ್ಲಿ ಬೇಲೂರು ಹಾಸನ ನಡುವೆ ರಾಷ್ಟ್ರೀಯ ಹೆದ್ದಾರಿ 373ರ ಅಭಿವೃದ್ಧಿ, ಹಾಸನ-ಹೊಳೆನರಸೀಪುರ ಚತುಷ್ಪಥ ರಸ್ತೆ, ಚನ್ನರಾಯಪಟ್ಟಣ-ಹೊಳೆನರಸೀಪುರ-ಅರಕಲಗೂಡು-ಕೊಡ್ಲಿಪೇಟೆ-ಮಡಿಕೇರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸುವ ಬಗ್ಗೆ ಚರ್ಚಿಸಲಾಯಿತು.

ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Trending News