ಜಾತಿಗಣತಿ ವರದಿಯಿಂದ ಒಬಿಸಿ ಮೀಸಲಾತಿ ಅಡ್ಡಿ ಪರಿಹರಿಸಬಹುದು: ಸಿದ್ದರಾಮಯ್ಯ

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದಕ್ಕೆ ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ.

Written by - Zee Kannada News Desk | Last Updated : Feb 13, 2022, 01:04 PM IST
  • ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಜಾರಿಗೆ ತರಬೇಕು
  • ಸುಪ್ರೀಂಕೋರ್ಟ್ ಮುಂದೆ ತನ್ನವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು
  • ರಾಜ್ಯ ಬಿಜೆಪಿ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕೆಂದ ವಿಪಕ್ಷ ನಾಯಕ ಸಿದ್ದರಾಮಯ್ಯ
ಜಾತಿಗಣತಿ ವರದಿಯಿಂದ ಒಬಿಸಿ ಮೀಸಲಾತಿ ಅಡ್ಡಿ ಪರಿಹರಿಸಬಹುದು: ಸಿದ್ದರಾಮಯ್ಯ title=
ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಸುಪ್ರೀಂಕೋರ್ಟ್(Supreme Court) ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ವಿಪಕ್ಷ ನಾಯಕ ಸಿದ್ದರಾಂಯ್ಯ(Siddaramaiah) ಹೇಳಿದ್ದಾರೆ.

ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘3 ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿ(OBC Reservations)ಯನ್ನು ರೂಪಿಸಬೇಕೆಂದು ಸುಪ್ರೀಂಕೋರ್ಟ್ ಹೇಳಿದೆ. ದೇಶದಲ್ಲಿಯೇ ಮೊದಲಬಾರಿ ಮನೆಮನೆಗೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆ’ ಅಂತಾ ಹೇಳಿದ್ದಾರೆ.

‘ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿ(Caste Census Report)ಯನ್ನು ಸಂಗ್ರಹಿಸಿದೆ. ರಾಜ್ಯ ಬಿಜೆಪಿ ಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಂಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು’ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಕೋರ್ಟ್ ಆವರಣದಲ್ಲಿ ದುರ್ವರ್ತನೆ ಆರೋಪ: ವಕೀಲ ಜಗದೀಶ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

‘ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯ ಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್(Supreme Court) ಮುಂದೆ ತನ್ನವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು’ ಅಂತಾ ಒತ್ತಾಯಿಸಿದ್ದಾರೆ.

‘ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದ್ದೆ. ಇದರಲ್ಲಿ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು. 2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿನ ಪರಿಹಾರಕ್ಕೆ ಪ್ರಯತ್ನಿಸಬೇಕು’ ಅಂತಾ ಹೇಳಿದ್ದಾರೆ.

‘ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದಕ್ಕೆ ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ. ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧವಿರುವುದರಿಂದ ಸುಪ್ರೀಂಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಬಿಜೆಪಿ ಸರ್ಕಾರ(BJP Government) ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು’ ಅಂತಾ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಗನ ಮುಖಕ್ಕೆ ಮಸಾಲೆ ಹಚ್ಚಿ ತಾಯಿಯಿಂದಲೇ ಚಿತ್ರಹಿಂಸೆ; ವಿಡಿಯೋ ವೈರಲ್

‘ಸುಪ್ರೀಂಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್–ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ದೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ತಕ್ಷಣ ವಿರೋಧಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು’ ಅಂತಾ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ. ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದ ಕಾರಣಕ್ಕೆ ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಂಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News