ಬೆಂಗಳೂರು: ರಾಜ್ಯದ ಕೆಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್.ಪುರಂ, ಶಿವಾನಂದ ಸರ್ಕಲ್, ಜಯನಗರ, ಮಲ್ಲೇಶ್ವರ, ವಿಧಾನಸೌಧ, ವಿಲ್ಸನ್ ಗಾರ್ಡನ್, ಶಾಂತಿನಗರ, ಎಂಜಿ ರಸ್ತೆ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಮೋಡ ಕವಿದ ವಾತಾವರಣವಿದೆ. ಇದರಿಂದ ವಾಹನ ಸಂಚಾರ ದುಸ್ತರವಾಗಿದೆ. ಬೆಂಗಳೂರು ಗ್ರಾಮಾಂತರ ಭಾಗದಲ್ಲಿ 20ಕ್ಕೂ ಹೆಚ್ಚು ಮನೆಗಳ ಹೆಂಚುಗಳು ಗಾಳಿಗೆ ಹಾರಿಹೋಗಿವೆ.
ಅಲ್ಲದೆ, ಚಿಕ್ಕಬಳ್ಳಾಪುರದಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೆ ಲಕ್ಷಾಂತರ ರೂ. ಬೆಲೆಬಾಳುವ ದ್ರಾಕ್ಷಿ ಬೆಳೆ ಹಾನಿಗೊಳಗಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಎರಡು ದಿನ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕಿ ಗೀತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.