ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯ ನಂತರ ಬಂಡಾಯದ ಬಿಸಿಯ ಕಾವು ಹೆಚ್ಚಾಗುತ್ತಿದೆ. ಬಿಜೆಪಿಯಿಂದ ಸಾಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬೇಳೂರು ಗೋಪಾಲಕೃಷ್ಣ ತಮ್ಮದೇ ಪಕ್ಷದ ಅಭ್ಯರ್ಥಿಯಾಗಿರುವ ಹರತಾಳು ಹಾಲಪ್ಪ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಕ್ ನೀಡಿದ್ದಾರೆ.
ಸಾಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ, ನಾಯಕರು ಮಾತುಕತೆ ನಡೆಸಿ ತಮಗೆ ನ್ಯಾಯ ಒದಗಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಬೇಳೂರು ಗೋಪಾಲ ಕೃಷ್ಣ ಅವರಿಗೆ ನಿರಾಸೆಯಾಗಿದ್ದು, ತಮ್ಮ ಬೆಂಬಲಿಗರ ಸಭೆಯಲ್ಲಿ ತೀರ್ಮಾನವಾದಂತೆ ಹಾಲಪ್ಪ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದು, ಏಪ್ರಿಲ್ 22 ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಹರತಾಳು ಹಾಲಪ್ಪ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇನ್ನು ಸಾಗರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.