ಬೆಂಗಳೂರು: ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಗ್ರಾಮಗಳು ಜಲಾವೃತವಾಗಿದೆ. ಈ ಮಧ್ಯೆ ಮುಂದಿನ ಮೂರು ಘಂಟೆಗಳಲ್ಲಿ ರಾಜ್ಯದ 4 ಜಿಲ್ಲೆಗಳಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಹಾಸನ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ, ಈ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮಕ್ಕೆ ನೀರು ನುಗ್ಗಿದೆ. ಮರಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಕಡಿತವಾಗಿದೆ.
ನಿರಂತರ ಮಳೆಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಭಾಗಮಂಡಲಡ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಉಂಟಾಗಿದೆ. ಸೋಮವಾರ ಪೇಟೆಯಲ್ಲಿ ಧಾರಾಕಾರ ಮಳೆಯಿಂದಾಗಿ ಇಲ್ಲಿನ ಗ್ರಾಮಗಳು ಭಾಗಶಃ ಮುಳುಗಿವೆ.
ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ತುರ್ತು ಸ್ಥಿತಿಯಲ್ಲಿ ರಕ್ಷಣೆಗಾಗಿ ಈ ಕೆಳಗಿನ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ: