ಬೆಂಗಳೂರು: ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರೈಲ್ವೆ ನಿಲ್ದಾಣಗಳು ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತು ನಗರದ ರೈಲು, ಪ್ರಮುಖ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ರಾಜ್ಯದ ಪ್ರಮುಖ ರಕ್ಷಣಾ ಕೇಂದ್ರಗಳು, ತರಬೇತಿ ಕೇಂದ್ರಗಳು, ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೆ ಭದ್ರತಾ ದೃಷ್ಟಿಯಿಂದ ವಿಮಾನ ನಿಲ್ದಾಣ, ರೈಲು ನಿಲ್ದಾಣ ಇತ್ಯಾದಿ ಕಡೆಗಳಲ್ಲಿ ಜನರ ತಪಾಸಣೆ, ವಸ್ತುಗಳ ತಪಾಸಣೆ ತೀವ್ರವಾಗಿ ನಡೆಯುತ್ತಿದೆ. ಭದ್ರತೆಯ ಭಾಗವಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನ ಉನ್ನತ ಮಟ್ಟದ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದಲ್ಲಿರುವ ಉಗ್ರರ ಅಡಗುದಾಣ ಬಾಲಾಕೋಟ್ ಮೇಲೆ ಭಾರತದ ವಾಯುಸೇನೆ ದಾಳಿ ನಡೆಸಿದ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಬಿಗಡಾಯಿಸಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ತೀವ್ರ ಕಟ್ಟೆಚ್ಚರವಹಿಸಲಾಗಿದೆ.