ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ಹ್ಯಾರಿಸ್ ನಲಪಾಡ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಕಳೆದ 116 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ನಲಪಾಡ್, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ನಲಪಾಡ್ ಸಲ್ಲಿಸಿರುವ ಜಾಮೀನು ಅರ್ಜಿ ಕುರಿತು ಬುಧವಾರ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಗುರುವಾರ ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ಈ ಸಂಬಂಧ ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್ 2 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಮತ್ತು ನ್ಯಾಯಾಲಯದ ಅನುಮತಿಯಿಲ್ಲದೆ ಬೆಂಗಳೂರು ಬಿಟ್ಟು ಹೋಗುವಂತಿಲ್ಲ, ಸಾಕ್ಷ್ಯ ನಾಶ ಮಾಡುವಂತಿಲ್ಲ ಮತ್ತು ವಿಚಾರಣೆಗೆ ತಪ್ಪದೆ ಹಾಜರಾಗುವಂತೆ ಸೂಚಿಸಿ ಷರತ್ತುಬದ್ಧ ಜಾಮೀನು ನೀಡಿದೆ.
ಫೆ.17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕಾರಣಕ್ಕೆ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತು ಆತನ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ನಂತರ ತಲೆಮರೆಸಿಕೊಂಡಿದ್ದ ನಲಪಾಡ್ ಫೆ.19ರಂದು ಪೊಲೀಸರಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದು, 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಆರೋಪಿಗಳಾಗಿದ್ದಾರೆ.