ಹುಬ್ಬಳ್ಳಿ: ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕರ್ನಾಟಕ ಸರ್ಕಾರದ ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಶನಿವಾರ ಮಧ್ಯಾಹ್ನ ಅವರ ಹುಟ್ಟೂರಾದ ಯರಗುಪ್ಪಿಯಲ್ಲಿ ನಡೆಯಲಿದೆ.
ಇಂದು ಸಂಜೆ 6.30ರಿಂದ ರಾತ್ರಿ 9 ಗಂಟೆವರೆಗೆ ಶಿವಳ್ಳಿ ಅವರ ಸ್ವಕ್ಷೇತ್ರ ಕುಂದಗೋಳದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಬಳಿಕ ಅವರ ಹುಟ್ಟೂರಾದ ಯರಗುಪ್ಪಿಗೆ ಕೊಂಡೊಯ್ದು, ಶನಿವಾರ ಮಧ್ಯಾಹ್ನ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಅಂತ್ಯಸಂಸ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜೆ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಅವರ ಸಲಹೆ ಮೇರೆಗೆ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದ ಶಿವಳ್ಳಿ ಅವರು, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವಳ್ಳಿ ಇದೇ ಮೊದಲ ಬಾರಿಗೆ ಸಚಿವರಾಗಿದ್ದರು.