ಮೈಸೂರು: ದಿನೇ-ದಿನೇ ಲೋಕಸಭಾ ಚುನಾವಣಾ ಬಿಸಿ ಕಾವೇರುತ್ತಲೇ ಇದೆ. ಏಳು ಹಂತಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಮೊದಲ ಹಾಗೂ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ನಿನ್ನೆಯಷ್ಟೇ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯಡಿಯೂರಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರ ಬೆಳಿಗ್ಗೆ ಸುಮಾರು 11:30ಕ್ಕೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ, ಚುನಾವಣಾಧಿಕಾರಿಯೂ ಆಗಿರುವ ಅಭಿರಾಮ್ ಜಿ.ಶಂಕರ್ ಅವರಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.
ಅಂದಹಾಗೇ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಲ್ಲ. ಬದಲಾಗಿ ಪಿರಿಯಾಪಟ್ಟಣ ನಿವಾಸಿ, 66 ವರ್ಷದ ನಿವೃತ್ತ ಸರ್ಕಾರಿ ನೌಕರ ಪಿ.ಎಸ್. ಯಡಿಯೂರಪ್ಪ.
ಸರ್ಕಾರಿ ನೌಕರಿಯಿಂದ ನಿವೃತ್ತರಾಗಿರುವ ಪಿ.ಎಸ್. ಯಡಿಯೂರಪ್ಪ ಸದ್ಯ ಕೃಷಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.