ಬೆಂಗಳೂರು: ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು ಶಾಲಾರಂಭವೆನ್ನುವ ಪ್ರಕ್ರಿಯೆ ಸುರಕ್ಷಿತವಾಗಿ, ಸುಲಲಿತವಾಗಿ ನಿರ್ವಹಣೆಯಾಗಲಿದೆ. ಹಾಗೂ ಲಭ್ಯವಾಗುವ ಸೀಮಿತ ಅವಧಿಯ ಹಿನ್ನೆಲೆಯಲ್ಲಿ ಮಾರ್ಚ್ 2021 ರಲ್ಲಿ ಎಸ್‌ಎಸ್‌ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸುರೇಶ್ ಕುಮಾರ್(S Suresh Kumar), ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮವನ್ನು ಅಂತಿಮಗೊಳಿಸಲಾಗುತ್ತದೆ. ಕನಿಷ್ಟ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಸಹ ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸಿಎಂ ಬಿಎಸ್ ವೈಗೆ ಮತ್ತೆ ಎದುರಾಗಿದೆ 'ಡಿನೋಟಿಫಿಕೇಷನ್' ಸಂಕಷ್ಟ..!
ವಿಶೇಷವಾಗಿ ಗ್ರಾಮೀಣ ಭಾಗಗಳ ಮಕ್ಕಳ ಹಿತದೃಷ್ಟಿಯಿಂದ ಆರಂಭಿಸಲಾದ ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಸಹ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿರುವ ಸಚಿವರು, ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಕ್ತ ನಿಲುವನ್ನು ಹೊಂದಿದೆ ಎಂದಿದ್ದಾರೆ.