ಬೆಂಗಳೂರು: ಕಾಗವಾಡ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇರುವುದರಿಂದ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದ ರಾಜು ಕಾಗೆ ಬಿಜೆಪಿಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜು ಕಾಗೆ, ಉಪಚುನಾವಣೆಯಲ್ಲಿ ಬಿಜೆಪಿ ಕಾಗವಾಡ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವ ವಿಚಾರದಲ್ಲಿ ಸೂಕ್ತ ನಿಲುವು ತಾಳಿಲ್ಲ. ಇದರಿಂದ ಬೇಸರವಾಗಿದೆ ಎಂದು ಅಸಮಾಧಾನ ಹೊರಕಾರಿದರು.
ಅಲ್ಲದೆ, ಮೂರು ವರ್ಷ ಸುಮ್ಮನಿರುವಂತೆ ಬಿಜೆಪಿ ಆಮಿಷ ಒಡ್ಡಿರುವುದಾಗಿ ಮಾಹಿತಿ ನೀಡಿದ ರಾಜುಕಾಗೆ, ನಿಗಮ-ಮಂಡಳಿ ಸ್ಥಾನ ನೀಡುವ ಬಗ್ಗೆಯೂ ಯಾವುದೇ ಭರವಸೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದೆಲ್ಲದರ ನಡುವೆ ತಮ್ಮ ಕ್ಷೇತ್ರದಲ್ಲಿ ಜನಾಭಿಪ್ರಾಯ ಸಂಗ್ರಹಿಸಲಾಗಿದ್ದು, ಜನಾಭಿಪ್ರಾಯದ ಮೇರೆಗೆ ನಾಳೆಯೇ ಭಾರತೀಯ ಜನತಾ ಪಕ್ಷ(ಬಿಜೆಪಿ)ಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ನಾಳಿದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಕಾಗವಾಡ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಅವರು ತಿಳಿಸಿದರು.
ಗಮನಾರ್ಹವಾಗಿ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಳೆದ ಚುನಾವಣೆಯಲ್ಲಿ ಶ್ರೀಮಂತ ಪಾಟೀಲ್ ವಿರುದ್ಧ ಪರಾಭವಗೊಂಡಿದ್ದ ಬಿಜೆಪಿ ಅಭ್ಯರ್ಥಿ ರಾಜು ಕಾಗೆ ಅಸಮಾಧಾನಗೊಂಡು ಪಕ್ಷ ತೊರೆಯಲು ನಿರ್ಧರಿಸಿದ್ದಾರೆ.