ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳಿಧರ್ ರಾವ್ ಮಾಡಿದ್ದ ಭ್ರಷ್ಟಾಚಾರ ಆರೋಪದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದ ಎಂದು ಸಿಎಂ ತಿಳಿಸಿದ್ದಾರೆ.
ಬಿಜೆಪಿ ಉಸ್ತುವಾರಿ ಮುರುಳಿಧರ್ ರಾವ್ ನಿನ್ನೆ ಸಿಎಂ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಜೊತೆಗೆ ಭ್ರಷ್ಟಾಚಾರದ ಬಗ್ಗೆ ಚರ್ಚೆಗೆ ಕರೆಯುವುದಾಗಿ ಹೇಳಿದ್ದರು. ಈ ಕುರಿತು ಇಂದು ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಭ್ರಷ್ಟಾಚಾರದ ಬಗ್ಗೆ ಬಹಿರಂಗ ಚರ್ಚೆ ಮಾಡಲು ನಾವು ಸಿದ್ದರಿದ್ದೇವೆ. ಮೊದಲು ಅವರು ನಮ್ಮ ವಿರುದ್ಧದ ಭ್ರಷ್ಟಾಚಾರ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಮುರುಳಿಧರ್ ರಾವ್ ಗೆ ಪ್ರತಿಸವಾಲು ಹಾಕಿದ್ದಾರೆ.
ಇದೇ ಸಂದರ್ಭದಲ್ಲಿ ರಾಹುಲ್ ಪ್ರಧಾನಿಯಾಗುವುದು ತಿರುಕನ ಕನಸು ಎಂದಿದ್ದ ಬಿ.ಎಸ್.ಯಡಿಯೂರಪ್ಪಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ರಾಜೀವ್ ಗಾಂಧಿ ಎಷ್ಟನೆ ವಯಸ್ಸಿಗೆ ಪ್ರಧಾನಮಂತ್ರಿಯಾಗಿದ್ದರು. ಇದು ಮಾಜಿ ಸಿಎಂ ಯಡಿಯೂರಪ್ಪಗೆ ಗೊತ್ತಿಲ್ಲವಾ...? ಬಿಜೆಪಿಯ 150 ಮಿಷನ್ ಹೇಳಿದ ತಕ್ಷಣ ಈಡೇರಿ ಬಿಡುತ್ತಾ? ಎಂದು ಪ್ರಶ್ನಿಸಿದರು.