ಶಿವಮೊಗ್ಗ ಜಿಲ್ಲೆ ಮಾದರಿ ನಗರವಾಗಿ ಅಭಿವೃದ್ಧಿಯಾಗಲಿದೆ: ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ

ಶಿವಮೊಗ್ಗ ನಗರದಲ್ಲಿ 32 ಕಿ.ಮೀ. ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಈಗಾಗಲೇ ಶೇ.30ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನುಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು.

Last Updated : Aug 14, 2019, 07:14 AM IST
ಶಿವಮೊಗ್ಗ ಜಿಲ್ಲೆ ಮಾದರಿ ನಗರವಾಗಿ ಅಭಿವೃದ್ಧಿಯಾಗಲಿದೆ: ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ title=
Photo Courtesy: Facebook

ಶಿವಮೊಗ್ಗ: ಶಿವಮೊಗ್ಗವನ್ನು ಮಾದರಿ ನಗರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಮಂಗಳವಾರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ನಗರದಲ್ಲಿ ಹೊರವರ್ತುಲ ರಸ್ತೆ, ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ, ಹಳೆ ಜೈಲು ಪ್ರದೇಶದಲ್ಲಿ ಸಾರ್ವಜನಿಕರ ಬಳಕೆಗೆ ಉದ್ಯಾನವನ, ಮೈದಾನ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ. ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ರೂಪಿಸಲಾಗುವುದು ಎಂದು ಹೇಳಿದರು.

ಶಿವಮೊಗ್ಗ ನಗರದಲ್ಲಿ 32 ಕಿ.ಮೀ. ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಈಗಾಗಲೇ ಶೇ.30ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನುಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಈಗಾಗಲೇ ಭೂಸ್ವಾಧೀನ ಪೂರ್ಣಗೊಂಡಿರುವ ಕಡೆಗಳಲ್ಲಿ ಕಾಮಗಾರಿಯನ್ನು ಆರಂಭಿಸಬೇಕು ಎಂದು ಅವರು ಸೂಚನೆ ನೀಡಿದರು.

ಶಿವಮೊಗ್ಗ ಹೊರ ವಲಯದಲ್ಲಿ ನೆನಗುದಿಗೆ ಬಿದ್ದಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ತಕ್ಷಣ ಆರಂಭಿಸಲು 40 ಕೋಟಿ ರೂ. ಬಿಡುಗಡೆ ಮಾಡುವುದಾಗಿ ತಿಳಿಸಿದರು. ಪ್ರಸ್ತುತ 1500 ಮೀಟರ್‌ವರೆಗೆ ರನ್‍ವೇ ನಿರ್ಮಾಣಕ್ಕೆ ಯಾವುದೇ ತಾಂತ್ರಿಕ ತೊಡಕು ಇರುವುದಿಲ್ಲ. ಆದರೆ, ಏರ್‌ಬಸ್‍ನಂತಹ ವಿಮಾನಗಳ ಹಾರಾಟಕ್ಕೆ 1800 ಮೀಟರ್ ರನ್‍ವೇ ಅಗತ್ಯವಿದ್ದು, ಇದಕ್ಕೆ ಎದುರಾಗುವ ಎಲ್ಲಾ ತಾಂತ್ರಿಕ ತೊಡಕುಗಳನ್ನು ನಿವಾರಿಸಿ ಆದಷ್ಟು ಬೇಗನೆ ವಿಮಾನ ನಿಲ್ದಾಣ ಕಾಮಗಾರಿಯನ್ನು ಆರಂಭಿಸಬೇಕು ಎಂದು ಹೇಳಿದರು.

ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಹಳೆ ಜೈಲಿನ ಪ್ರದೇಶದಲ್ಲಿ ಸ್ಮಾರಕಗಳನ್ನು ಉಳಿಸಿಕೊಂಡು ಫ್ರೀಡಂ ಪಾರ್ಕ್, ಸುಂದರವಾದ ವಿಶಾಲ ಉದ್ಯಾನವನ, ಸಾರ್ವಜನಿಕರ ಬಳಕೆಗೆ ಮೈದಾನ, ಸಭೆ ಸಮಾರಂಭಗಳನ್ನು ನಡೆಸಲು ಅವಕಾಶ ಸೇರಿದಂತೆ ನಾಗರಿಕರಿಗೆ ಅನುಕೂಲವಾಗುವಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕುರಿತು ಸಮಗ್ರ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಪೊಲೀಸ್ ತರಬೇತಿ ಕೇಂದ್ರ ನಿರ್ಮಾಣಕ್ಕೆ ಅಗತ್ಯವಾದ 50 ಎಕರೆ ಸ್ಥಳವನ್ನು ಬೇರೆ ಕಡೆ ಗುರುತಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Trending News