ಮಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಇಂದೂ ಸಹ ವರುಣನ ಅಬ್ಬರ ಮುಂದುವರೆಯಲಿದ್ದು, ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿವೆ. ಕೊಡಗು ಜಿಲ್ಲೆಯ ಭಾಗಮಂಡಲ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತವಾಗಿದ್ದು, ಭಾಗಮಂಡಲ- ನಾಪೋಕ್ಲು ರಸ್ತೆ ಸಂಪರ್ಕವಿಲ್ಲದಂತಾಗಿದೆ. ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿ 375 ರಲ್ಲಿ ಗುಡ್ಡ ಕುಸಿದಿದ್ದು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪುತ್ತೂರು ತಾಲೂಕಿನ ಹಂಚಿನಡ್ಕ ಗ್ರಾಮದಲ್ಲಿ ನಾಲ್ಕು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದೇ ಗ್ರಾಮದ ಹಲವು ಮನೆಗಳಿಗೆ ತೀವ್ರ ಹಾನಿಯಾಗಿದೆ.