ನವದೆಹಲಿ: ಮಹತ್ವದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ 17 ಅನರ್ಹ ಶಾಸಕರ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟಿನಲ್ಲಿ ನಡೆಯಲಿದೆ.
ಮಂಗಳವಾರ ಅನರ್ಹ ಶಾಸಕರ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠದ ಎದುರು ಕೇಂದ್ರ ಚುನಾವಣಾ ಆಯೋಗದ ವಕೀಲ ರಾಕೇಶ್ ದ್ವಿವೇದಿ ಕಾಂಗ್ರೆಸ್ ನಿಲುವಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನಲ್ಲಿ ಭಾಗಿದಾರಿಯಾಗಿದೆ. ಇದೇ ವೇಳೆ ಕರ್ನಾಟಕದ ಹೈಕೋರ್ಟಿನಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಿದೆ. ಒಂದೇ ಪ್ರಕರಣದ ಬಗ್ಗೆ ಎರಡೆರಡು ನ್ಯಾಯಾಲಯಗಳಲ್ಲಿ ದೂರು ಸಲ್ಲಿಸಿರುವುದೇಕೆ? ಮತ್ತು ಎರಡು ಕಡೆ ವಿಚಾರಣೆ ನಡೆಸುವುದೇಕೆ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರ ಕೆಲವು ನಿಗಮ ಮಂಡಳಿಗಳ ನೇಮಕ ಮಾಡಿದೆ. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟಿನಲ್ಲಿ ದೂರು ದಾಖಲಿಸಲಾಗಿದೆ ಎಂದು ಹೇಳಿದರು.
ಈ ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್, ರಾಜ್ಯ ಹೈಕೋರ್ಟ್ ವಿಚಾರಣೆಗೆ ತಡೆ ನೀಡುವಂತೆ ಅರ್ಜಿ ಸಲ್ಲಿಸಿ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚಿಸಿ ಹೈಕೋರ್ಟ್ ವಿಚಾರಣೆಗೆ ತಡೆ ನೀಡಿ ಬುಧವಾರ ಸುಪ್ರೀಂ ಕೋರ್ಟಿನಲ್ಲಿರುವ ದಾವೆಯ ವಿಚಾರಣೆ ನಡೆಸುವುದಾಗಿ ಹೇಳಿತು. ಇಂದು ಆ ವಿಚಾರಣೆ ನಡೆಯಲಿದೆ.