ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿರುವ ಕಾರಣ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಸ್ಥಾನ ಗಳಿಸಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಮೈತ್ರಿ ಸರ್ಕಾರ ಇರುವುದರಿಂದಾಗಿ ನಾವು ನಿರೀಕ್ಷಿತ ಸ್ಥಾನ ಗಳಿಸಲು ಸಾಧ್ಯವಾಗಿಲ್ಲ. ಇದು ಸಮ್ಮಿಶ್ರ ಸರ್ಕಾರದ ಮೇಲೆ ಯಾವುದೇ ಪರಿನಾಮ ಬೀರುವುದಿಲ್ಲ. ಆದರೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಇಂದು ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಮತಎಣಿಕೆಯಲ್ಲಿ ಒಟ್ಟು 2664 ಸ್ಥಾನಗಳ ಪೈಕಿ ಕಾಂಗ್ರೆಸ್'ಗೆ 982, ಬಿಜೆಪಿ 927, ಜೆಡಿಎಸ್-ಬಿಎಸ್ಪಿ 388 ಹಾಗೂ ಇತರೆ 363 ಸ್ಥಾನಗಳು ದೊರೆತಿವೆ.