ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 4 ರಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಏಳು ದಿನ ಯಾವುದೇ ತೊಂದರೆ ಇಲ್ಲದೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಾರ್ಚ್ 4 ನೇ ತಾರೀಖಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ಈವರೆಗೂ ಯಾವುದೇ ಅಡೆತಡೆ ಇಲ್ಲದೆ ಸುಲಲಿತವಾಗಿ ನಡೆದಿದೆ. ಇದುವರೆಗೂ 39 ವಿಷಯಗಳ ಪರೀಕ್ಷೆ ಪೂರ್ಣಗೊಂಡಿದೆ. ಇನ್ನೂ ಕೂಡ 7 ಪರೀಕ್ಷೆಗಳು ಬಾಕಿ ಉಳಿದಿದ್ದು ವಿದ್ಯಾರ್ಥಿಗಳು ಯಾವುದೇ ವದಂತಿಗೆ ತಲೆಕೆಡಿಸಿಕೊಳ್ಳದೆ ನಿರ್ಭಯವಾಗಿ ಪರೀಕ್ಷೆ ಎದುರಿಸಬೇಕು ಎಂದು ಸಚಿವರು ಸಂದೇಶ ರವಾನಿಸಿದ್ದಾರೆ.
ವಿಜಯಪುರದಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿದ್ದನ್ನು ಹೊರತುಪಡಿಸಿ ಬೇರೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದೆ ಎಂದವರು ತಿಳಿಸಿದರು.
ಮೌಲ್ಯಮಾಪನ ಬಹಿಷ್ಕಾರ ಹೇಳಿಕೆ ಆತಂಕ ಮೂಡಿಸಿದೆ, ಆದರೆ ಚಿಂತಿಸುವ ಅಗತ್ಯವಿಲ್ಲ:
ಇದೇ ಸಂದರ್ಭದಲ್ಲಿ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸುವುದಾಗಿ ನೀಡಿರುವ ಹೇಳಿಕೆ ಬೇಸರ ಉಂಟು ಮಾಡಿದ್ದು, ಆತಂಕ ಮೂಡಿಸಿದೆ ಎಂದು ತಿಳಿಸಿದ ಸಚಿವ ಸುರೇಶ್‍ಕುಮಾರ್, ಉಪನ್ಯಾಸಕರ ಸಂಘಗಳ ಬೇಡಿಕೆಗೆ ಸಂಬಂಧಿಸಿದಂತೆ ಮಾತುಕತೆ ಮುಂದುವರೆದಿದೆ. ಅವರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಚಿಂತಿಸುವ ಅಗತ್ಯವಿಲ್ಲ ಎಂದರು.