ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಇಂದು ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಮನೆ ಮೇಲೆ ಕಲ್ಲುತೂರಾಟ ನಡೆಸಿ, ಪ್ರತಿಭಟನೆ ನಡೆಸಿದರು.
ಇತ್ತೀಚೆಗಷ್ಟೇ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಆಪರೇಶನ್ ಕಮಲ ಆಡಿಯೋದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಜೆಡಿಎಸ್ ಪಕ್ಷದ ಬಗ್ಗೆ, ಸಮ್ಮಿಶ್ರ ಸರ್ಕಾರದ ಹಗುರವಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಬುಧವಾರ ಬೆಳಿಗ್ಗೆಯಿಂದಲೇ ಶಾಸಕ ಪ್ರೀತಂ ಗೌಡ ಮನೆ ಮುಂದೆ ಪ್ರತಿಭಟನೆ ನಡೆಸಿದರು.
ಬೈಕ್ ಗಳಲ್ಲಿ ಆಗಮಿಸಿದ ನೂರಾರು ಜೆಡಿಎಸ್ ಕಾರ್ಯಕರ್ತರು ವಿದ್ಯಾನಗರದಲ್ಲಿರುವ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ನಿವಾಸದ ಎದುರು ಧರಣಿ ಕುಳಿತು ತೊಲಗಲಿ, ತೊಲಗಲಿ ಪ್ರೀತಂ ತೊಲಗಲಿ, ದೇವೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರೀತಂ ವಿರುದ್ಧ ಎಸ್ ಐಟಿ ತನಿಖೆ ನಡೆಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಜೆಡಿಎಸ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆಯವರೆಗೂ ತಲುಪಿತು. ಘಟನೆಯಲ್ಲಿ ಓರ್ವನಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಶಾಸಕರ ಮನೆಗೆ ಬಿಗಿ ಬಂದೋಬಸ್ತ್ ಕಲ್ಪಿಸಿದರು.