ನವದೆಹಲಿ: ಲೋಕಸಭಾ ಚುನಾವಣೆ ಮುಗಿಯುವವರೆಗೆ ಪ್ರಧಾನಿ ಮೋದಿ ಕುರಿತ ಚಲನಚಿತ್ರವನ್ನು ಬಿಡುಗಡೆ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಏಪ್ರಿಲ್ 11 ರಂದು ಬಿಡುಗಡೆಯಾಗಬೇಕಿದ್ದ ಈ ಚಲನಚಿತ್ರವನ್ನು ಈಗ ಚುನಾವಣೆ ಮುಗಿಯುವವರೆಗೆ ಬಿಡುಗಡೆ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ. ಲೋಕಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಿದ್ದೆ ಆದಲ್ಲಿ ಅದು ಚುನಾವಣಾ ಕಣದ ಮೇಲೆ ಪ್ರಭಾವ ಬೀರಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮಂಗಳವಾರದಂದು ಈ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಿರಾಕರಿಸಿತ್ತು, ಆದರೆ ಚುನಾವಣಾ ಸಮಯದಲ್ಲಿ ಈ ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಕುರಿತು ಅಂತಿಮ ನಿರ್ಧಾರದ ವಿವೇಚನೆ ಚುನಾವಣಾ ಆಯೋಗಕ್ಕೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
ಇನ್ನೊಂದೆಡೆ ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ಬಿಡುಗಡೆಯಾಗುತ್ತಿರುವ ಈ ಚಲನಚಿತ್ರವು ಬಿಜೆಪಿ ಪರವಾಗಿದೆ.ಈ ಸಂದರ್ಭದಲ್ಲಿ ಬಿಡುಗಡೆಯಾಗುತ್ತಿರುವುದು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಹಾಗೆ ಆಗುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.