ನವದೆಹಲಿ: ಮಕ್ಕಳ ಮೇಲೆ ಅತ್ಯಾಚಾರ ಸೇರಿದಂತೆ ಲೈಂಗಿಕ ಅಪರಾಧವೆಸಗುವವರಿಗೆ ಗಲ್ಲು ಸೇರಿದಂತೆ ಕಠಿಣ ಶಿಕ್ಷೆಯನ್ನು ವಿಧಿಸುವ ನಿಟ್ಟಿನಲ್ಲಿ 2012ರ ಪೋಕ್ಸೊ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಅದರಂತೆ 2012ರ ಪೋಕ್ಸೊ ಕಾಯ್ದೆಯಡಿಯಲ್ಲಿ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರಿಗೆ ಗಲ್ಲು ಶಿಕ್ಷೆ, ದಂಡ ವಿಧಿಸಲು ಮತ್ತು ಜೈಲು ಶಿಕ್ಷೆಗೆ ಅವಕಾಶ ನೀಡಲಾಗಿದೆ. ಈ ಮೂಲಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕಡಿಮೆ ಆಗಲಿದೆ ಎಂದು ನಿರೀಕ್ಷಿಸಲಾಗಿದೆ.
ಈ ಹಿಂದೆ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುತ್ತಿದ್ದ ತೀವ್ರ ಸ್ವರೂಪದ ಅತ್ಯಾಚಾರಕ್ಕೆ ಮಾತ್ರ ಮರಣದಂಡನೆ ವಿಧಿಸಲಾಗುತ್ತಿತ್ತು. ಆದರೀಗ, ಪೋಕ್ಸೋ ಕಾಯ್ದೆಯಡಿ ಬರುವ ಲೈಂಗಿಕ ದೌರ್ಜನ್ಯ ಸೇರಿದಂತೆ ಇತ್ಯಾದಿ ಅಪರಾಧಗಳಿಗೂ ಗಲ್ಲು ಶಿಕ್ಷೆಯನ್ನು ಗರಿಷ್ಠ ಶಿಕ್ಷೆಯಾಗಿ ವಿಧಿಸಲು ಉದ್ದೇಶಿಸಲಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಶಿಕ್ಷೆಯ ಅಂಶಗಳ ಬಗ್ಗೆ ಸ್ಪಷ್ಟತೆಯನ್ನು ಸ್ಥಾಪಿಸುವ ಉದ್ದೇಶವನ್ನು ಈ ತಿದ್ದುಪಡಿ ಹೊಂದಿದೆ ಎಂದು ಸರ್ಕಾರ ತಿಳಿಸಿದೆ.