ಚಿಕ್ಕಮಗಳೂರು : ವಿಜಯಪುರದಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣವನ್ನು ಖಂಡಿಸಿ ಕನ್ನಡ ಪರ, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಚಿಕ್ಕಮಗಳೂರು ಬಂದ್ ಗೆ ಕರೆ ನೀಡಲಾಗಿದೆ.
ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಬಂದ್ ಮಾಡಲು ಕರೆ ನೀಡಿದ್ದು, ಖಾಸಗಿ ಶಾಲಾ ಕಾಲೇಜುಗಳನ್ನು ಮುಚ್ಚಿಸಲು ಪ್ರಯತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಚಾರ್ಜ್ ಮಾಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದಕ್ಕೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕರ್ತರ ಬಂಧನ ವಿರೋಧಿಸಿ ನಗರ ಪೊಲೀಸ್ ಠಾಣೆ ಆವರಣದಲ್ಲಿ ದಲಿತ ಸಂಘಟನೆಗಳು ಘೋಷಣೆ ಕೂಗುತ್ತಿವೆ. ಜತೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಿಜಯಪುರದ ಮಂಜುನಾಥ ನಗರದ ಮಲ್ಲಿಕಾರ್ಜುನ್ ಸ್ಕೂಲ್ ಬಳಿ ಅಪ್ರಾಪ್ತ ಬಾಲಕಿ ತೆರಳುತ್ತಿದ್ದಾಗ ಮೂವರು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕುತ್ತಿಗೆ ಹಿಸುಕಿ ಕೊಲೆಗೈದಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಆದರೂ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮೃತ ಬಾಲಕಿ ಕುಟುಂಬ ಮತ್ತು ಕನ್ನಡ ಪರ ಸಂಘಟನೆಗಳು ನಿನ್ನೆ ವಿಜಯಪುರ ಬಂಧ್ಗೆ ಕರೆ ನೀಡಿದ್ದರು.
ಈ ಪ್ರಕರಣಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತ್ರಸ್ಥ ಕುಟುಂಬಕ್ಕೆ 8.5 ಲಕ್ಷ ರೂ. ಪರಿಹಾರ ನೀಡಿದ್ದು, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದಾರೆ.