ಬೆಳಗಾವಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಒಬ್ಬ ಅಪ್ರಬುದ್ಧ ರಾಜಕಾರಣಿ. ಅವರಿಗೆ ಸಂವಿಧಾನವನ್ನು ಸರಿಯಾಗಿ ಓದಲು ಹೇಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರ 14ನೇ ಫೈನಾನ್ಸ್ ಕಮಿಷನ್ ಶಿಫಾರಸ್ಸಿನ ಪ್ರಕಾರ ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ಬೆಂಬಲ ನೀಡಿದೆ. ಹೀಗಾಗಿ ನೆರೆ ಸಂತ್ರಸ್ತರ ಪುನರ್ವಸತಿಗಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೊರೆ ಹೋಗುವ ಅವಶ್ಯಕತೆ ಇಲ್ಲ ಎಂದು ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರವು ಒದಗಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬೆಳಗಾವಿಯಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ತಿರುಗೇಟು ನೀಡಿದರು. ತೇಜಸ್ವಿ ಸೂರ್ಯ ಒಬ್ಬ ಅಪ್ರಬುದ್ಧ ರಾಜಕಾರಣಿ. ಅವರಿಗೆ ಸಂವಿಧಾನವನ್ನು ಸರಿಯಾಗಿ ಓದಲು ಹೇಳಿ ಎಂದು ವ್ಯಂಗ್ಯವಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವಾಗಲೀ ಅಥವಾ ಕೇಂದ್ರ ಸರ್ಕಾರವಾಗಲೀ ರಾಜ್ಯದ ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.