ಬೆಂಗಳೂರು: ಇದೇ ಮಾರ್ಚ್ 23ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ರಾಜ್ಯದಿಂದ ಬಿಜೆಪಿ ಅಭ್ಯರ್ಥಿಯಾಗಿ ರಾಜೀವ್ ಚಂದ್ರಶೇಖರ್ ಸೋಮವಾರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಲು ಮಾರ್ಚ್ 12 ಕೊನೇ ದಿನವಾಗಿದ್ದರಿಂದ, ರಾಜೀವ್ ಚಂದ್ರಶೇಖರ್ ಅವರು ಇಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ, ಬಿಜೆಪಿ ಬೆಂಬಲದೊಂದಿಗೆ ರಾಜ್ಯಸಭೆಗೆ ಚುನಾಯಿತರಾಗಿದ್ದ ರಾಜೀವ್ ಚಂದ್ರಶೇಖರ್ ಈಗ ಅಧಿಕೃತವಾಗಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ಅಶ್ವತ್ಥನಾರಾಯಣ್, ರವಿಕುಮಾರ್ ಮೊದಲಾದ ಬಿಜೆಪಿ ನಾಯಕರು ರಾಜೀವ್ ಚಂದ್ರಶೇಖರ್ ಉಪಸ್ಥಿತರಿದ್ದರು.
ರಾಜ್ಯಸಭೆಗೆ ಕರ್ನಾಟಕ ವಿಧಾನಸಭೆಯಿಂದ ನಾಲ್ವರು ಸದಸ್ಯರು ಆಯ್ಕೆಯಾಗಲಿದ್ದಾರೆ. ಈ ಪೈಕಿ ಬಿಜೆಪಿಯಿಂದ ಸ್ಪರ್ಧಿಸಿರುವ ಏಕೈಕ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ನಿರಾಯಾಸವಾಗಿ ಆಯ್ಕೆಯಾಗುವುದರಲ್ಲಿ ಸಂದೇಹವಿಲ್ಲ ಎನ್ನಲಾಗಿದೆ.