ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಬೇಕೇ, ಬೇಡವೇ ಎಂಬ ವಾದ-ವಿವಾದದ ಬೆನ್ನಲ್ಲೇ ಲಿಂಗಾಯತ ಮತ್ತು ಬಸವತತ್ವ ಒಪ್ಪುವ ವೀರಶೈವರು ಅಲ್ಪಸಂಖ್ಯಾತರು ಎಂದು ಮಾನ್ಯತೆ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಪ್ರಸ್ತುತ ಇರುವ ಧಾರ್ಮಿಕ ಅಲ್ಪಸಂಖ್ಯಾತರ ಮೀಸಲಾತಿ ಸೌಲಭ್ಯಗಳನ್ನು ಒಳಗೊಂಡಂತೆ ಹಕ್ಕು ಹಾಗೂ ಆಸಕ್ತಿಗಳಿಗೆ ಧಕ್ಕೆ ಬಾರದಂತೆ, ಲಿಂಗಾಯತ ಹಾಗೂ ಬಸವ ತತ್ವಗಳನ್ನು ನಂಬುವ ವೀರಶೈವ ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರೆಂದು ಮಾನ್ಯತೆ ನೀಡಲಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗವು ರಾಜ್ಯ ಸರ್ಕಾರಕ್ಕೆ ಮಾಡಿರುವ ಶಿಫಾರಸ್ಸನ್ನು ಪರಿಗಣಿಸಿ, ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಅಧಿನಿಯಮದಂತೆ ಈ ಮಾನ್ಯತೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒತ್ತಾಯ
ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆ ಸೆಕ್ಷನ್ 2(ಡಿ)ಅಡಿಯಲ್ಲಿ ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡಬೇಕು ಎಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಸಲ್ಲಿಸಿದ್ದ ವರದಿಯನ್ನು ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸೋಮವಾರವಷ್ಟೇ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು.