ಬೆಂಗಳೂರು: ಕೋವಿಡ್ ನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ.ಈ ಕುರಿತು ವಿಸ್ತೃತವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ನಡೆದ, 'ವಿಶ್ವ ಕ್ಷಯರೋಗ ದಿನ' ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೋವಿಡ್ (Coronavirus) ನಿಂದ ಗುಣಮುಖರಾದವರಿಗೆ ಮೊಟ್ಟ ಮೊದಲ ಬಾರಿಗೆ ಸರ್ಕಾರದಿಂದಲೇ ಕ್ಷಯ ಪರೀಕ್ಷೆ ಮಾಡಲಾಗಿದೆ.ಪರೀಕ್ಷೆಗೊಳಪಟ್ಟ 25 ಲಕ್ಷ ಜನರಲ್ಲಿ 144 ಜನರಿಗೆ ಕ್ಷಯ ದೃಢಪಟ್ಟಿದೆ. ಕೋವಿಡ್ ಬಂದ ಬಳಿಕವೇ ಇವರಿಗೆ ಕ್ಷಯ ಬಂದಿದೆ.ಹೀಗಾಗಿ ಈ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ.ರಾಜ್ಯವನ್ನು ಕ್ಷಯ ಮುಕ್ತ ಮಾಡುವ ಗುರಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.
ಇದನ್ನೂ ಓದಿ: ಕರೋನಾದ ಮುಂದಿನ ರೂಪಾಂತರವು ಓಮಿಕ್ರಾನ್ಗಿಂತ ಹೆಚ್ಚು ಅಪಾಯಕಾರಿ..!
ಕೋವಿಡ್ ನಂತೆಯೇ ಕ್ಷಯವೂ ಸಾಂಕ್ರಾಮಿಕ ರೋಗ.ಕೋವಿಡ್ ವೈರಸ್ ನಿಂದ ಬಂದರೆ, ಕ್ಷಯವು ಬ್ಯಾಕ್ಟೀರಿಯಾದಿಂದ ಬರುತ್ತದೆ. 2030 ರ ವೇಳೆಗೆ ಜಗತ್ತನ್ನು ಕ್ಷಯರೋಗದಿಂದ ಮುಕ್ತ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು 2025 ರೊಳಗೆ ಭಾರತವನ್ನು ಕ್ಷಯ ಮುಕ್ತ ಮಾಡಬೇಕು ಎಂಬ ಗುರಿ ಪ್ರಕಟಿಸಿದೆ.ಇದು ಕೇವಲ ವೈದ್ಯರು ಅಥವಾ ಸರ್ಕಾರದಿಂದ ಸಾಧ್ಯವಿಲ್ಲ.ಇದಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ ಎಂದರು.
ಸಾಮಾನ್ಯವಾಗಿ ರೋಗ ಬಂದ ಬಳಿಕ ಚಿಕಿತ್ಸೆ ಪಡೆಯಲಾಗುತ್ತದೆ.ಇದರ ಬದಲು ಲಕ್ಷಣಗಳು ಕಂಡುಬಂದ ಕೂಡಲೇ ಚಿಕಿತ್ಸೆ ಪಡೆಯಲು ಆರಂಭಿಸಬೇಕು.ಎರಡು ವಾರಕ್ಕೂ ಹೆಚ್ಚು ಕಾಲ ಕೆಮ್ಮು, ಸಂಜೆ ಜ್ವರ, ತೂಕ ಇಳಿಕೆಯಾಗುವುದು ಮೊದಲಾದ ಲಕ್ಷಣ ಕಂಡುಬಂದರೆ ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು.ಈಗ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಷಯ ಪರೀಕ್ಷೆ ಮಾಡುವ ಸೌಲಭ್ಯವಿದೆ. ಜನರು ಇಂತಹ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಬೇಕು. ಬೇಗ ಪರೀಕ್ಷೆ ಮಾಡಿಸಿದರೆ ಉತ್ತಮ ಚಿಕಿತ್ಸೆ ಪಡೆಯಬಹುದು ಎಂದರು.
ಇದನ್ನೂ ಓದಿ: ಕೊರೊನಾದಿಂದ ರೈಲುಗಳಲ್ಲಿ ಸ್ಥಗಿತಗೊಂಡಿದ್ದ ಆಹಾರ ಸೇವೆ ಆರಂಭಿಸಲು ರೈಲ್ವೆ ಇಲಾಖೆ ಸೂಚನೆ
ಗ್ರಾಮೀಣ ಭಾಗಗಳಲ್ಲಿ ಜನರು ಖಾಯಿಲೆ ಇದ್ದರೂ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸುವುದಿಲ್ಲ. ಒಬ್ಬ ಕ್ಷಯ ರೋಗಿಯಿಂದ ಕನಿಷ್ಠ 10 ಜನರಿಗೆ ರೋಗ ಹರಡಬಹುದು.ಹೀಗಾದಲ್ಲಿ, ಒಬ್ಬರ ತಪ್ಪಿನಿಂದ ಎಲ್ಲರಿಗೂ ಸಮಸ್ಯೆ ಉಂಟಾಗುತ್ತದೆ.ಆದ್ದರಿಂದ ಈ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕಿದೆ.ರಾಜ್ಯ ಸರ್ಕಾರ ರೋಗಗಳ ಬಗ್ಗೆ ಅರಿವು ಮೂಡಿಸಲು ವರ್ಷಕ್ಕೆ 5 ಕೋಟಿ ರೂ.ಗೂ ಅಧಿಕ ಹಣ ಖರ್ಚು ಮಾಡುತ್ತಿದೆ ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.