ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ 48ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಕೇಂದ್ರ ಕಚೇರಿಯ ಎದುರು ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯ ಎದುರು ಜಮಾಯಿಸಿದ್ದು, ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆಯಾದ ನಂತರದ ಮೊದಲ ಬಾರಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಾದ್ಯಗಳನ್ನು ಬಾರಿಸುತ್ತಾ, ಅದರ ತಾಳಕ್ಕೆ ಕುಣಿದು ಸಂಭ್ರಮಿಸುತ್ತಿದ್ದಾರೆ. ಅಲ್ಲದೆ, ರಾಹುಲ್ ಗಾಂಧಿಗೆ ಜನ್ಮ ದಿನಕ್ಕೆ ಶುಭಕೋರುವ ಪೋಸ್ಟರ್'ಗಳೂ ಸಹ ಕಚೇರಿಯ ಹೊರಗೆ ಎದ್ದು ಕಾಣುತ್ತಿವೆ.
ರಾಹುಲ್ ಗಾಂಧಿ ಜನ್ಮ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೂ ಶುಭ ಹಾರೈಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಸುದೀರ್ಘ ಆಯಸ್ಸು ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಜನ್ಮದಿನಕ್ಕೆ ಪ್ರಧಾನಿ ಮೋದಿ ಶುಭಹಾರೈಕೆ
48 ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಪುತ್ರರಾಗಿ ಜೂನ್ 19, 1970ರಂದು ಜನಿಸಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಭಾರತೀಯ ಯುವ ಕಾಂಗ್ರೆಸ್ ಮತ್ತು ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇದೀಗ ಅಖಿಲ ಭಾರತ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ಅಲಂಕರಿಸಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿದ್ದಾರೆ. ರಾಹುಲ್ ಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ದೇಶದ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.