ಬೆಂಗಳೂರು: ರಾಜ್ಯದಲ್ಲಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ದರಗಳನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.
ಇಂದಿಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡೀಸೆಲ್ ಬೆಲೆ ಈರಿಕೆಯಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಏರಿಸಲು ಪ್ರಸ್ತಾಪ ಬಂದಿದೆ. ಆದರೆ ಸದ್ಯದಲ್ಲಿ ಏರಿಕೆ ಮಾಡುವುದಿಲ್ಲ ಎಂದು ಹೇಳಿದರು.
ಬಸ್ ಪ್ರಯಾಣ ದರವನ್ನು ಹೆಚ್ಚಿಸದಿದ್ದರೆ ನಿಗಮಕ್ಕೆ ಸುಮಾರು 500 ಕೋಟಿ ರೂ. ನಷ್ಟ ಅನುಭವಿಸಲಿದೆ ಎಂದು ಅಂದಾಜು ಮಾಡಲಾಗಿದೆ. ಆದರೂ, ಸದ್ಯಕ್ಕೆ ಪ್ರಯಾಣ ದರ ಏರಿಕೆ ಮಾಡದೆ, ವೆಚ್ಚ ಕಡಿಮೆ ಮಾಡಿ, ಆದಾಯ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.
ಮುಂದುವರೆದು ಮಾತನಾಡಿದ ಅವರು, ಜೂ.27 ಹಾಗೂ 28ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಇಲಾಖೆಯ ಬಜೆಟ್ ಪೂರ್ವಭಾವಿ ಚರ್ಚೆ ನಡೆಯಲಿದೆ. ಆ ಸಂದರ್ಭದಲ್ಲಿ ಟಿಕೆಟ್ ದರ ಪರಿಷ್ಕರಣೆ ಕುರಿತು ಚರ್ಚಿಸಲಾಗುವುದು ಎಂದು ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.