ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಪ್ರತಿಪಕ್ಷಗಳ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲು ತಮ್ಮದು ಯಾವುದೇ ಅಭ್ಯಂತರವಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ.
ದೆಹಲಿಯಲ್ಲಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಮತಾ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದರೆ ಅವರಿಗೆ ಬೆಂಬಲಿಸುತ್ತಿರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು " ಒಂದು ವೇಳೆ ಮಮತಾ ಅವರನ್ನು ಪಿಎಂ ಅಭ್ಯರ್ಥಿ ಎಂದು ಬಿಂಬಿಸಿದರೆ ಖಂಡಿತಾ ಸ್ವಾಗತಿಸುತ್ತೇನೆ.ಇಂದಿರಾ ಗಾಂಧಿ 17 ವರ್ಷಗಳ ಕಾಲ ಈ ದೇಶವನ್ನು ಆಳಿದ್ದರು.ಕೇವಲ ಪುರುಷರಷ್ಟೇ ಪಿಎಂ ಯಾಕಾಗಬೇಕು ? ಮಮತಾ ಅಥವಾ ಮಾಯಾವತಿ ಯಾಕಾಗಬಾರದು" ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ತಾವು ಮಹಿಳಾ ಪ್ರಧಾನಮಂತ್ರಿಗೆ ವಿರೋಧವಿಲ್ಲ ಎಂದ ದೇವೇಗೌಡ 1996 ರಲ್ಲೇ ಮಹಿಳಾ ಮಿಸಲಾತಿ ಮಸೂದೆಯನ್ನು ಜಾರಿಗೆ ತರುವ ಪ್ರಯತ್ನ ನಡೆಸಿದ್ದರು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ಒಕ್ಕೂಟದ ಅವಶ್ಯಕತೆ ಬಗ್ಗೆ ಮಾತನಾಡಿದ ದೇವೇಗೌಡರು" ದೇಶದಲ್ಲಿ ಒಂದು ರೀತಿಯ ಭಯದ ವಾತಾವರಣ ಇರುವುದರಿಂದ ಉತ್ತರಪ್ರದೇಶ, ಬಿಹಾರ ಮತ್ತು ಗುಜರಾತ್ ರಾಜ್ಯಗಳಲ್ಲಿ ಅಲ್ಪಸಂಖ್ಯಾತರಿಗೆ ಉಸಿರುಕಟ್ಟುವ ಭೀತಿಯಲ್ಲಿದ್ದಾರೆ. ಆದ್ದರಿಂದ, 2019 ರ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಒಂದು ಸೂಕ್ತ ಒಕ್ಕೂಟದ ಅವಶ್ಯಕತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು " ಈ ಬಗ್ಗೆ ಸೀಟು ಹಂಚಿಕೆ ವಿಚಾರವಾಗಿ ಚರ್ಚೆಯಾಗಿಲ್ಲ ಮುಂದಿನ 2-3 ತಿಂಗಳುಗಳಲ್ಲಿ ಈ ವಿಚಾರ ಯಾವ ದಿಕ್ಕಿನೆಡೆಗೆ ತೆರೆದುಕೊಳ್ಳುತ್ತದೆ ಎನ್ನುವುದರ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ" ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.