ಬೆಂಗಳೂರು: ಆಪರೇಶನ್ ಕಮಲವನ್ನು ಮಾನು ಮಾಡುವುದಿಲ್ಲ, ಅದರ ಅಗತ್ಯವೂ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ಮತ್ತು ದಿನೇಶ್ ಗುಂಡೂರಾವ್ ಅವರ ಹೇಳಿಕೆಗೆ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಪಕ್ಷದ ತುರ್ತು ಸಭೆ ಇದ್ದ ಕಾರಣಕ್ಕೆ ದೆಹಲಿಗೆ ಹೋಗಿದ್ದೆನೇ ಹೊರತು ಆಪರೇಶನ್ ಕಮಲ ಮಾಡಲು ಅಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿಷಾ ಜೊತೆ ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಲು ತೆರಳಿದ್ದೆ. ಆದರೆ ಇದನ್ನೇ ವಿರೋಧ ಪಕ್ಷದವರು ಸಮ್ಮಿಶ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದ್ದಾರೆ.
ರಾಜ್ಯದ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ. ನಾಳೆಯಿಂದಲೇ ಪಕ್ಷದ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದ ಯಡಿಯೂರಪ್ಪ, ಮುಂಬರಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷ ಸಿದ್ಧತೆ ನಡೆಸಿದ್ದು, ಅಧಿಕ ಸ್ಥಾನಗಳನ್ನು ಗಳಿಸುವ ಗುರಿ ಹೊಂದಿದೆ ಎಂದು ಹೇಳಿದರು.
ರಾಜ್ಯದ ಮೈತ್ರಿ ಸರಕಾರವನ್ನು ಅತಂತ್ರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಯವರಿಗೆ ಅಧಿಕಾರವಿಲ್ಲದೆ ಇರಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಏನೇನೋ ಮಾಡುತ್ತಿದ್ದಾರೆ. ನಮ್ಮ ಶಾಸಕರನ್ನೂ ಸಂಪರ್ಕಿಸಿ ಸ್ಥಾನಮಾನದ ಆಸೆ ತೋರಿಸುತ್ತಿದ್ದಾರೆ. ಆಪರೇಷನ್ ಕಮಲದ ಹಾದಿ ತುಳಿಯಲು ಹೊರಟು ರಾಜ್ಯದ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಆರೋಪಿಸಿದ್ದರು.