ಮೈಸೂರು: ಕೊಡಗು ಜಿಲ್ಲೆಯಲ್ಲಿ ಭೀಕರ ಪ್ರವಾಹದಿಂದ ಜನತೆ ತತ್ತರಿಸಿಹೋಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದಂತೆ ಕೊಡಗಿನಲ್ಲೂ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಂತೆ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಸಾಕಷ್ಟು ಜನ ಅಪಾಯದಲ್ಲಿ ಸಿಲುಕಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಎಲ್ಲಾ ರಕ್ಷಣಾ ಕ್ರಮಗಳನ್ನು ಕೈಗೊಂಡಿದೆ. ಅಷ್ಟೇ ಅಲ್ಲದೆ, ಹಲವು ಸಂಘ ಸಂಸ್ಥೆಗಳು ಪ್ರವಾಹ ಸಂತ್ರಸ್ಥರಿಗೆ ನೆರವನ್ನೂ ನೀಡಲು ಮುಂದಾಗಿದ್ದಾರೆ. ಆದರೂ ಕೇಂದ್ರದ ಸಹಾಯದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಕೇಂದ್ರ ಸರ್ಕಾರ ಕೊಡಗು ಜಿಲ್ಲೆಯ ಸಂಕಷ್ಟಕ್ಕೆ ನೆರವಾಗಬೇಕಿದೆ ಎಂದು ಹೇಳಿದರು.
ನಾನೂ ಕೂಡ ಮಡಿಕೇರಿಗೆ ಭೇಟಿ ನೀಡಬೇಕೆಂದಿದ್ದೆ. ಆದರೆ, ರಸ್ತೆ ಸಂಪರ್ಕ ಕಡಿತಗೊಂಡ ಹಿನ್ನೆಲೆ ಜನರನ್ನು ಸಂಪರ್ಕಿಸಲು ಆಗುತ್ತಿಲ್ಲ. ಈಗಾಗಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಅಗತ್ಯ ನೆರವು ಒದಗಿಸಲು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎಂದರು.